ಚೆನ್ನೈ: ಅಣ್ಣಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿರಿಯಾನಿ ಮಾರಾಟಗಾರ ಜ್ಞಾನಶೇಖರನ್ ಅಪರಾಧಿ ಎಂದು ಇಲ್ಲಿನ ಮಹಿಳಾ ನ್ಯಾಯಾಲಯ ತೀರ್ಪು ನೀಡಿದೆ.
ಅಪರಾಧಿಗೆ ಗರಿಷ್ಠ ಶಿಕ್ಷೆ ನೀಡುವಂತೆ ಪ್ರಾಸಿಕ್ಯೂಷನ್ ಮನವಿ ಮಾಡಿದೆ. ಪ್ರಕರಣದ ವಿಚಾರಣೆ ನಡೆಸಿದ ಮಹಿಳಾ ನ್ಯಾಯಲಯದ ನ್ಯಾಯಾಧೀಶರಾದ ರಾಜಲಕ್ಷ್ಮಿ ಅವರು, ಶಿಕ್ಷೆ ಪ್ರಮಾಣವನ್ನು ಜೂನ್ 2ರಂದು ಪ್ರಕಟಿಸುವುದಾಗಿ ತಿಳಿಸಿದ್ದಾರೆ.
ಜ್ಞಾನಶೇಖರನ್ ವಿರುದ್ಧ ಪ್ರಾಸಿಕ್ಯೂಷನ್ 11 ಆರೋಪಗಳನ್ನು ಮಾಡಿದ್ದು, ಪೂರಕ ದಾಖಲೆ ಮತ್ತು ವಿಧಿವಿಜ್ಞಾನ ಸಾಕ್ಷ್ಯಗಳ ಮೂಲಕ ಸಾಬೀತುಪಡಿಸಿದೆ ಎಂದು ಸರ್ಕಾರಿ ವಕೀಲರು ತಿಳಿಸಿದ್ದಾರೆ.
ಜ್ಞಾನಶೇಖರನ್ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಸಂತ್ರಸ್ತೆಯು ಕಳೆದ ವರ್ಷ ಡಿಸೆಂಬರ್ 23ರಂದು ಕೊಟ್ಟುಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಜ್ಞಾನಶೇಖರನ್ ಅವರನ್ನು ಬಂಧಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.