ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸತತ ಮೂರನೇ ಭಾರಿಯೂ ಶೂನ್ಯ ಸಂಪಾದನೆ ಮಾಡುವ ಎಲ್ಲಾ ಲಕ್ಷಣಗಳು ಕಾಣುತ್ತಿದ್ದು ಬಿಜೆಪಿ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ.
ಬೆಳಗ್ಗೆ 11 ಗಂಟೆ ಸುಮಾರಿಗೆ ಫಲಿತಾಂಶದ ಟ್ರೆಂಡ್ ಪ್ರಕಾರ ಕ್ರಾಂಗ್ರೆಸ್ ಯಾವ ಕ್ಷೇತ್ರದಲ್ಲೂ ಮುನ್ನಡೆ ಕಾಯ್ದುಕೊಂಡಿಲ್ಲ. ಬಾದ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಮತ ಎಣಿಕೆಯ ಆರಂಭಿಕ ಸುತ್ತುಗಳಲ್ಲಿ ಮುನ್ನಡೆ ಕಾಯ್ದುಕೊಂಡಿತ್ತು. ನಂತರ ಹಿನ್ನಡೆ ಅನುಭವಿಸಿದ್ದು ಸ್ಪರ್ಧೆ ಮಾಡಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಹಿನ್ನಡೆಯಲ್ಲಿದೆ.
15 ವರ್ಷಗಳ ಕಾಲ ರಾಷ್ಟ್ರ ರಾಜಧಾನಿಯನ್ನು ಆಳಿದ ಕಾಂಗ್ರೆಸ್ 2013ರ ವಿಧಾನಸಭಾ ಚುನಾವಣೆಯಲ್ಲಿ 8 ಸ್ಥಾನಗಳನ್ನು ಪಡೆದಿತ್ತು. 28 ಕ್ಷೇತ್ರಗಳಲ್ಲಿ ಗೆದಿದ್ದ ಎಎಪಿಗೆ ಬೆಂಬಲ ನೀಡಿತ್ತು. ಆದರೆ ಕೆಲವೇ ದಿನಗಳಲ್ಲಿ ಮೈತ್ರಿ ಮುರಿದು ಹೋಗಿತ್ತು. ಈ ಚುನಾವಣೆಯಲ್ಲಿ ಬಿಜೆಪಿ 31 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿ ಅಧಿಕಾರಿದಿಂದ ದೂರ ಉಳಿದಿತ್ತು.
2015ರ ವಿಧಾನಸಭಾ ಚುನಾವಣೆಯಲ್ಲಿ ಎಎಪಿ 67 ಸ್ಥಾನಗಳನ್ನು ಗೆದ್ದು ಹೊಸ ದಾಖಲೆ ಬರೆದಿತ್ತು. ಬಿಜೆಪಿ 3 ಸ್ಥಾನಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಶೂನ್ಯ ಸಂಪಾದನೆ ಮಾಡಿತ್ತು.
2020ರ ವಿಧಾನಸಭಾ ಚುನಾವಣೆಯಲ್ಲಿ ಎಎಪಿ 62 ಸ್ಥಾನಗಳನ್ನು ಗೆದ್ದು ಎರಡನೇ ಸಲ ಅಧಿಕಾರ ಹಿಡಿದಿತ್ತು. ಬಿಜೆಪಿ 8 ಸ್ಥಾನಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಶೂನ್ಯ ಸಂಪಾದನೆ ಮಾಡಿತ್ತು.
2025ರ ಚುನಾವಣೆಯಲ್ಲೂ ಕಾಂಗ್ರೆಸ್ ಶೂನ್ಯ ಸಂಪಾದನೆ ಮಾಡುವ ಎಲ್ಲಾ ಲಕ್ಷಣಗಳಿವೆ. ಕಾಂಗ್ರೆಸ್ ಒಂದೂ ಕ್ಷೇತ್ರದಲ್ಲೂ ಮುನ್ನಡೆಯಲ್ಲಿ ಇಲ್ಲ. ಆದರೆ ಬಿಜೆಪಿ ಅಧಿಕಾರಕ್ಕೆ ಮರಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.