ಪಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರುವ ಜನ ಸುರಾಜ್ ಪಕ್ಷದ ಅಧ್ಯಕ್ಷ ಪ್ರಶಾಂತ್ ಕಿಶೋರ್ ಅವರ ನಿರ್ಧಾರವನ್ನು ಬಿಜೆಪಿ ನಾಯಕ, ಕೇಂದ್ರ ಸಚಿವ ಅನುರಾಗ್ ಠಾಕೂರ್ ಟೀಕಿಸಿದ್ದಾರೆ.
ಚುನಾವಣಾ ಪ್ರಚಾರದ ಭಾಗವಾಗಿ ಗುರುವಾರ ಪಟ್ನಾಗೆ ಬಂದಿರುವ ಠಾಕೂರ್, ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ‘ಸೇನಾ ಮುಖ್ಯಸ್ಥನೇ ಪಲಾಯನ ಮಾಡಿದರೆ ಸೇನೆಯ ಗತಿಯೇನು?’ ಎಂದು ಪರೋಕ್ಷವಾಗಿ ಲೇವಡಿ ಮಾಡಿದ್ದಾರೆ.
ಇದೇ ವೇಳೆ ಬಿಜೆಪಿಯ 101 ಅಭ್ಯರ್ಥಿಗಳ ಪೈಕಿ ಮುಸ್ಲಿಮರಿಗೆ ಟಿಕೆಟ್ ನೀಡದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ‘ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಲಾಗಿದೆ. ನಮ್ಮದು ಜಾತಿ, ಧರ್ಮ ನೋಡಿ ಸೌಲಭ್ಯ ನೀಡುವ ಪಕ್ಷ ಅಲ್ಲ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ತತ್ವದ ಮೇಲೆ ನಿಂತಿರುವ ಪಕ್ಷ ನಮ್ಮದು. ಗೆಲ್ಲುವವನಿಗೆ ಟಿಕೆಟ್ ಸಿಗುತ್ತದೆ’ ಎಂದು ಹೇಳಿದ್ದಾರೆ.
ಪಕ್ಷ ಸಂಘಟನೆಯ ಕಾರ್ಯದಲ್ಲಿ ತೊಡಗಿಸಿಕೊಳ್ಳವುದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬುಧವಾರ ಪ್ರಶಾಂತ್ ಕಿಶೋರ್ ಹೇಳಿದ್ದರು. ಪಕ್ಷದ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿರುವುದಾಗಿಯೂ ತಿಳಿಸಿದ್ದರು.
'ನಾನು ಬಿಹಾರ ಚುನಾವಣೆಯ ಅಖಾಡಕ್ಕೆ ಇಳಿಯಬಾರದು ಎಂಬುದು ಪಕ್ಷದ ನಿಲುವಾಗಿದೆ. ಅದಕ್ಕಾಗಿಯೇ ರಾಧೋಪುರದಿಂದ ತೇಜಸ್ವಿ ಯಾದವ್ ವಿರುದ್ಧ ಮತ್ತೊಬ್ಬ ಅಭ್ಯರ್ಥಿಯನ್ನು ಘೋಷಿಸಲಾಗಿದೆ. ಇದು ಪಕ್ಷದ ಹಿತದೃಷ್ಟಿಯಿಂದ ತೆಗೆದುಕೊಂಡ ನಿರ್ಧಾರವಾಗಿದೆ. ನಾನು ಸ್ಪರ್ಧಿಸುವುದಾದರೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುವುದಿಲ್ಲ' ಎಂದು ಕಿಶೋರ್ ಹೇಳಿದ್ದರು.
ಬಿಹಾರ ವಿಧಾನಸಭೆ ಚುನಾವಣೆ ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ನಡೆಯಲಿದೆ. ನವೆಂಬರ್ 14ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.