ನವದೆಹಲಿ: ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ಕೃತ್ಯವನ್ನು ಯುದ್ಧಕ್ಕೆ ಸಮವಾದ ಕೃತ್ಯವೆಂದು ಪರಿಗಣಿಸಲಾಗುತ್ತದೆ ಮತ್ತು ಅದಕ್ಕೆ ತಕ್ಕಂತೆ ಪ್ರತಿಕ್ರಿಯೆ ನೀಡಲಾಗುತ್ತದೆ ಎಂದು ಭಾರತ ಸರ್ಕಾರದ ಉನ್ನತ ಮೂಲಗಳು ಶನಿವಾರ ತಿಳಿಸಿವೆ.
‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ತೀವ್ರಗೊಂಡಿರುವ ನಡುವೆಯೇ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
ಈ ನಿರ್ಧಾರದೊಂದಿಗೆ ಭಯೋತ್ಪಾದಕ ಕೃತ್ಯಗಳನ್ನು ಸಂಪೂರ್ಣವಾಗಿ ಮಟ್ಟಹಾಕಲು ಕೇಂದ್ರ ಸರ್ಕಾರ ಅಣಿಯಾಗಿದೆ. ಇದು ಭಯೋತ್ಪಾದಕ ಸಂಘಟನೆಗಳಿಗೆ ‘ಆಶ್ರಯ’ ನೀಡುತ್ತಿರುವ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ನೀಡುವ ಉದ್ದೇಶವನ್ನು ಹೊಂದಿದೆ ಎಂದು ಭಾವಿಸಲಾಗಿದೆ.
ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 22 ಪ್ರವಾಸಿಗರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆಯು, ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ 9 ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿತ್ತು.
ಈ ನಡುವೆ ಪಾಕಿಸ್ತಾನ ಸೇನೆಯು ಭಾರತದ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ಮುಂದುವರಿಸಿದ್ದು, ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.