ADVERTISEMENT

ದಿಶಾ ಬಂಧನ; ಪ್ರಜಾಪ್ರಭುತ್ವ ಮೇಲೆ ಹಿಂದೆಂದೂ ಕಂಡಿಲ್ಲದ ರೀತಿಯ ದಾಳಿ: ಕೇಜ್ರಿವಾಲ್

ಪಿಟಿಐ
Published 15 ಫೆಬ್ರುವರಿ 2021, 6:34 IST
Last Updated 15 ಫೆಬ್ರುವರಿ 2021, 6:34 IST
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್   

ನವದೆಹಲಿ:ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಟೂಲ್‌ಕಿಟ್ ಸಿದ್ಧಪಡಿಸಿದ ಪ್ರಕರಣದಲ್ಲಿ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರ ಬಂಧನವನ್ನು ಖಂಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪ್ರಜಾಪ್ರಭುತ್ವ ಮೇಲೆ ಹಿಂದೆಂದೂ ಕಂಡಿಲ್ಲದ ರೀತಿಯ ದಾಳಿಯಾಗಿದೆ ಎಂದು ವ್ಯಾಖ್ಯಾನಿಸಿದ್ದಾರೆ.

ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಹೇಗೆ ಬೆಂಬಲಿಸಬೇಕು ಎಂಬುದನ್ನು ವಿವರಿಸುವ ಟೂಲ್‌ಕಿಟ್ ಸಿದ್ಧಪಡಿಸಿದ ಆರೋಪದಲ್ಲಿ ಬೆಂಗಳೂರಿನ 21 ವರ್ಷ ವಯಸ್ಸಿನ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ಬಂಧಿಸಲಾಗಿದೆ. ಇದು ವಿರೋಧ ಪಕ್ಷಗಳಿಂದ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಅವವಿಂದ್ ಕೇಜ್ರಿವಾಲ್, 21 ವರ್ಷದ ದಿಶಾ ರವಿ ಬಂಧನವು ಪ್ರಜಾಪ್ರಭುತ್ವ ಮೇಲೆ ಹಿಂದೆಂದೂ ಕಂಡಿಲ್ಲದ ರೀತಿಯ ದಾಳಿಯಾಗಿದೆ. ನಮ್ಮ ರೈತರಿಗೆ ಬೆಂಬಲ ನೀಡುವುದು ಅಪರಾಧವಲ್ಲ ಎಂದು ಉಲ್ಲೇಖಿಸಿದರು.

ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ಪದವೀಧರೆ ಆಗಿರುವ ದಿಶಾ, 'ಫ್ರೈಡೇಸ್ ಫಾರ್ ಫ್ಯೂಚರ್ ಇಂಡಿಯಾ' ಸ್ಥಾಪಕ ಸದಸ್ಯರುಗಳಲ್ಲಿ ಒಬ್ಬರಾಗಿದ್ದಾರೆ.

ದಿಶಾ ಸಿದ್ಧಪಡಿಸಿರುವ ಟ್ವಿಟರ್ ಟೂಲ್‌ಕಿಟ್, ರೈತರ ಪ್ರತಿಭಟನೆಯನ್ನು ಉತ್ತೇಜಿಸಿದ್ದು, ಬಳಿಕ ಅದನ್ನು ತಿದ್ದಿದ್ದರು ಎಂದು ಆರೋಪಿಸಲಾಗಿದೆ. ದಿಶಾ ರವಿ ವಿರುದ್ಧ ದೇಶದ್ರೋಹ, ಜನರ ನಡುವೆ ದ್ವೇಷಕ್ಕೆ ಕುಮ್ಮಕ್ಕು ಮತ್ತು ಅಪರಾಧ ಒಳಸಂಚಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ:

ಈ ಟೂಲ್‌ಕಿಟ್ ಸ್ವೀಡನ್‌ನ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ್ದರು.

ಜನವರಿ 26 ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ರೈತರು ನಡೆಸಿದ ಟ್ರ್ಯಾಕ್ಟರ್ ಪೆರೇಡ್‌ನಲ್ಲಿ ಭಾರಿ ಹಿಂಸಾಚಾರ ನಡೆದಿತ್ತು. ಅಲ್ಲದೆಪ್ರತಿಭಟನಕಾರರ ಗುಂಪೊಂದುಕೆಂಪುಕೋಟೆಗೆ ನುಗ್ಗಿ ಧಾರ್ಮಿಕ ಧ್ವಜವನ್ನು ಹಾರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.