ಸಂಜಯ್ ಸಿಂಗ್
ನವದೆಹಲಿ: ಸುಳ್ಳು ಆರೋಪಗಳನ್ನು ಹೊರಿಸಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿತ್ತು, ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕ್ಷಮೆ ಕೋರಬೇಕು ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಆಗ್ರಹಿಸಿದ್ದಾರೆ.
ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಕೇಜ್ರಿವಾಲ್ ಅವರನ್ನು ಇ.ಡಿ ಹಾಗೂ ಸಿ.ಬಿ.ಐ ಬಂಧಿಸಿದ್ದನ್ನು ಉಲ್ಲೇಖಿಸಿ ಅವರು ಹೀಗೆ ಹೇಳಿದ್ದಾರೆ.
‘ತಥಾಕಥಿತ ಅಬಕಾರಿ ಹಗರಣ ಸುಳ್ಳು ಎಂಬುದು ಸಾಬೀತಾಗಿದೆ. ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಹಾಗೂ ನನ್ನನ್ನು ಬಂಧಿಸಿದ್ದು ಕಾನೂನು ಬಾಹಿರ. ಮೂರು ವರ್ಷಗಳ ಬಳಿಕ ಇದೀಗ ತನಿಖೆಗೆ ಅನುಮತಿ ನೀಡಬೇಕು ಎಂದು ಅವರಿಗೆ ಗೊತ್ತಾಗಿದೆ. ಬಿಜೆಪಿಯವರು ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎನ್ನುವುದನ್ನು ಇದು ಸಾಬೀತುಪಡಿಸುತ್ತದೆ’ ಎಂದು ಹೇಳಿದ್ದಾರೆ.
ಅಬಕಾರಿ ನೀತಿ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯಕ್ಕೆ ಕೇಂದ್ರ ಗೃಹ ಸಚಿವಾಲಯವು ಅನುಮತಿ ನೀಡಿದ ಬೆನ್ನಲ್ಲೇ ಸಿಂಗ್ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.
ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಗರಣ ಸಂಬಂಧ ಅರವಿಂದ ಕೇಜ್ರಿವಾಲ್ ಅವರನ್ನು ಕಳೆದ ವರ್ಷ ಮಾರ್ಚ್‌ನಲ್ಲಿ ಇ.ಡಿ ಬಂಧಿಸಿತ್ತು. ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗುವವರೆಗೆ ಅವರು ದೆಹಲಿಯ ತಿಹಾರ್ ಜೈಲಿನಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.