ADVERTISEMENT

ಅಸ್ಸಾಂನಲ್ಲಿ 'ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ' ರದ್ದು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಫೆಬ್ರುವರಿ 2024, 2:54 IST
Last Updated 24 ಫೆಬ್ರುವರಿ 2024, 2:54 IST
<div class="paragraphs"><p>ಮದುವೆ</p></div>

ಮದುವೆ

   

ಪ್ರಾತಿನಿಧಿಕ ಚಿತ್ರ

ಗುವಾಹಟಿ(ಅಸ್ಸಾಂ): ರಾಜ್ಯದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸುವ ನಿಟ್ಟಿನಲ್ಲಿ ಅಸ್ಸಾಂ ಸಚಿವ ಸಂಪುಟ ಶುಕ್ರವಾರ ಮಹತ್ವದ ನಿರ್ಧಾರ ಕೈಗೊಂಡಿದೆ. ‘ಅಸ್ಸಾಂ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ, 1935' ಅನ್ನು ರದ್ದುಪಡಿಸಿ ಆದೇಶಿಸಿದೆ.

ADVERTISEMENT

ಈ ಬಗ್ಗೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಕ್ರಮವು ಅಸ್ಸಾಂನಲ್ಲಿ ಬಾಲ್ಯ ವಿವಾಹಗಳನ್ನು ನಿಷೇಧಿಸುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಎಂದು ಹೇಳಿದ್ದಾರೆ.

ಸದ್ಯ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆಯಡಿ 94 ವಿವಾಹಗಳು ನೋಂದಣಿಯಾಗಿದ್ದು, ಅವುಗಳನ್ನು ರದ್ದು ಮಾಡಲಾಗುತ್ತದೆ. ಅವರೆಲ್ಲರಿಗೂ ಒಂದು ಬಾರಿ ತಲಾ ₹2 ಲಕ್ಷ ಪರಿಹಾರವನ್ನು ನೀಡಲಾಗುತ್ತದೆ. ರಾಜ್ಯದಲ್ಲಿ ಮುಸ್ಲಿಂ ವಿವಾಹ ಮತ್ತು ವಿಚ್ಛೇದನಗಳ ನೋಂದಣಿಯನ್ನು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ನೋಂದಣಾಧಿಕಾರಿಗಳು ಮಾಡಲಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

'ಫೆಬ್ರುವರಿ 23ರಂದು, ಹಳೆಯ ಅಸ್ಸಾಂ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯಿದೆಯನ್ನು ರದ್ದುಗೊಳಿಸುವ ಮಹತ್ವದ ನಿರ್ಧಾರವನ್ನು ಅಸ್ಸಾಂ ಸಚಿವ ಸಂಪುಟ ತೆಗೆದುಕೊಂಡಿದೆ. ಇದರಡಿ ವಧು ಮತ್ತು ವರರು ಕ್ರಮವಾಗಿ 18 ಮತ್ತು 21 ರ ವಯಸ್ಸನ್ನು ತಲುಪದಿದ್ದರೂ ಸಹ ವಿವಾಹ ನೋಂದಣಿಗೆ ಅವಕಾಶ ಇತ್ತು. ಈಗ ನಾವು ಕೈಗೊಂಡಿರುವ ಕ್ರಮವು ಅಸ್ಸಾಂನಲ್ಲಿ ಬಾಲ್ಯ ವಿವಾಹಗಳನ್ನು ನಿಷೇಧಿಸುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ' ಎಂದು ಸಿಎಂ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.