ADVERTISEMENT

ಪ್ರವಾಹದಿಂದ ಅಸ್ಸಾಂ ತತ್ತರ: ಕೇಂದ್ರದಿಂದ ನೆರವಿನ ಭರವಸೆ

ಪಿಟಿಐ
Published 18 ಜೂನ್ 2022, 13:45 IST
Last Updated 18 ಜೂನ್ 2022, 13:45 IST
   

ಗುವಾಹಟಿ: ನಿರಂತರ ಮಳೆಯಿಂದ ಉಂಟಾದ ಪ್ರವಾಹದಿಂದ ಅಸ್ಸಾಂ ತತ್ತರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಶನಿವಾರ ಮಾತನಾಡಿ ಪ್ರವಾಹ ಪರಿಸ್ಥಿತಿಯ ಬಗ್ಗೆ ಅವಲೋಕನ ನಡೆಸಿದರು. ಕೇಂದ್ರದಿಂದ ಸಾಧ್ಯವಿರುವ ಎಲ್ಲ ರೀತಿಯ ನೆರವು ನೀಡುವುದಾಗಿಯೂ ಅವರು ಹೇಳಿದ್ದಾರೆ.

ಹಿಮಂತ ಬಿಸ್ವಾ ಶರ್ಮಾ ಅವರು ಶನಿವಾರ ಸಂತ್ರಸ್ತ ಜನರಿಗೆ ಆಶ್ರಯ ನೀಡುತ್ತಿರುವ ಹಲವಾರು ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ 28 ಜಿಲ್ಲೆಗಳಲ್ಲಿ 19 ಲಕ್ಷ ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಈ ವರ್ಷ ಪ್ರವಾಹ ಮತ್ತು ಭೂಕುಸಿತದಿಂದ ಒಟ್ಟು 55 ಜನರು ಸಾವನ್ನಪ್ಪಿದ್ದಾರೆ.

ADVERTISEMENT

ಹೊಜೈ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶದಿಂದ 24 ಜನರನ್ನು ಸಾಗಿಸುತ್ತಿದ್ದ ದೋಣಿಯೊಂದು ಶುಕ್ರವಾರ ತಡರಾತ್ರಿ ಮಗುಚಿ ಬಿದ್ದಿದೆ. ಮೂವರು ಮಕ್ಕಳು ನಾಪತ್ತೆಯಾಗಿದ್ದು, 21 ಮಂದಿಯನ್ನು ರಕ್ಷಿಸಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶರ್ಮಾ, ‘ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಸಿದ್ಧವಾಗಿದೆ. ಸಂತ್ರಸ್ತರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಭಾರತೀಯ ಸೇನೆಯು ನೆರವು ನೀಡಲು ಸಿದ್ಧವಿದ್ದು, ಅಗತ್ಯವಿದ್ದಾಗ ಸಹಾಯ ಪಡೆಯಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಹೇಳಿದರು.

ರಾಜ್ಯದಲ್ಲಿನ ಬಹುತೇಕ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಒಟ್ಟು 2,930 ಗ್ರಾಮಗಳು ಪ್ರವಾಹದಿಂದ ಹಾನಿಗೊಳಗಾಗಿದ್ದು, 43,338 ಹೆಕ್ಟೇರ್ ಬೆಳೆ ನೀರಿನಲ್ಲಿ ಮುಳುಗಿದೆ. 410 ಜಾನುವಾರುಗಳು ನೀರಿನಲ್ಲಿ ಕೊಚ್ಚಿಹೋಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.