ADVERTISEMENT

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತನ ಸಾವು

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಪಿಟಿಐ
Published 1 ಏಪ್ರಿಲ್ 2021, 7:19 IST
Last Updated 1 ಏಪ್ರಿಲ್ 2021, 7:19 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನಂದಿಗ್ರಾಮ: ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರ ಮೃತದೇಹ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗುರುವಾರ ಪತ್ತೆಯಾಗಿದೆ. ಪ್ರತಿಷ್ಠಿತ ಚುನಾವಣಾ ಕಣವಾಗಿರುವ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಇದು ಉದ್ವಿಗ್ನತೆಗೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉದಯ್‌ ದುಬೆ ಮೃತ ವ್ಯಕ್ತಿ.ಮಾರ್ಚ್‌ 30ರಂದು ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿಯನ್ನು ಬೆಂಬಲಿಸಿ ನಡೆದ ಚುನಾವಣಾ ಪ್ರಚಾರದಲ್ಲಿ ಹಿರಿಯ ನಟ ಮಿಥುನ್‌ ಚಕ್ರವರ್ತಿ ರೋಡ್‌ ಶೋ ನಡೆಸಿದ್ದರು. ಅದರಲ್ಲಿ ದುಬೆ ಅವರು ಭಾಗವಹಿಸಿದ್ದರಿಂದ ಕುಪಿತಗೊಂಡಿದ್ದ ಟಿಎಂಸಿ ನಾಯಕರು ಅವರನ್ನು ಬೆದರಿಸಿದ್ದರು. ಹೀಗಾಗಿ ದುಬೆ ಒತ್ತಡದಲ್ಲಿದ್ದರು ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಈ ಆರೋಪವನ್ನು ನಿರಾಕರಿಸಿರುವ ಟಿಎಂಸಿ, ಸಾವಿನ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ದೂರಿದೆ. ‘ಕೌಟುಂಬಿಕ ಸಮಸ್ಯೆಗಳಿಂದ ದುಬೆ ಆತ್ಮಹತ್ಯೆ ಮಾಡಿಕೊಂಡಿರಬಹುದು’ ಎಂದು ಟಿಎಂಸಿಯ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.

ADVERTISEMENT

‘ಈ ಕುರಿತು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಲಾಗಿದೆ. ಮರಣೋತ್ತರ ವರದಿ ಬಂದ ಬಳಿಕ ನಿಖರವಾದ ಕಾರಣವನ್ನು ತಿಳಿಯಬಹುದು’ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ತನಿಖೆ ನಡೆಯುತ್ತಿದ್ದು, ಪರಿಸ್ಥಿತಿ ನಿಯಂತ್ರಿಸಲು ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅವರ ಮಾಜಿ ಸಹಾಯಕ ಸುವೇಂದು ಅಧಿಕಾರಿಯ ನಡುವೆ ತೀವ್ರ ಹಣಾಹಣಿ ನಡೆಯುತ್ತಿರುವ ಕಾರಣ ನಂದಿಗ್ರಾಮದಲ್ಲಿ ಸೆಕ್ಷನ್‌ 144ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.