ADVERTISEMENT

ಮಹಾರಾಷ್ಟ್ರ: ಮೊಘಲ್‌ ದೊರೆ ಔರಂಗಜೇಬ್‌ ಸಮಾಧಿ ಸಮೀಪ ಡ್ರೋನ್ ಹಾರಾಟ ನಿಷೇಧ

ಪಿಟಿಐ
Published 19 ಮಾರ್ಚ್ 2025, 9:31 IST
Last Updated 19 ಮಾರ್ಚ್ 2025, 9:31 IST
<div class="paragraphs"><p>ಔರಂಗಜೇಬ್‌ ಸಮಾಧಿ</p></div>

ಔರಂಗಜೇಬ್‌ ಸಮಾಧಿ

   

Credit: Special Arrangement

ಮುಂಬೈ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಖುಲ್ತಾಬಾದ್‌ನಲ್ಲಿರುವ ಮೊಘಲ್‌ ದೊರೆ ಔರಂಗಜೇಬ್‌ ಸಮಾಧಿ ತೆರವಿಗೆ ಆಗ್ರಹಿಸಿ ಪ್ರತಿಭಟನೆಗಳು ಭುಗಿಲೆದ್ದಿರುವ ಬೆನ್ನಲ್ಲೇ ಸಮಾಧಿ ಸುತ್ತಮುತ್ತಲಿನ ಪ್ರದೇಶವನ್ನು ಡ್ರೋನ್ ಹಾರಾಟ ನಿಷೇಧ ವಲಯವನ್ನಾಗಿ ಸರ್ಕಾರ ಪೋಷಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಔರಂಗಜೇಬ್‌ ಸಮಾಧಿ ತೆರವುಗೊಳಿಸುವ ವಿಚಾರಕ್ಕೆ ಸಂಬಂಧಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಪತ್ತೆಹಚ್ಚುವಲ್ಲಿ ಮತ್ತು ಅವುಗಳನ್ನು ಅಳಿಸುವಲ್ಲಿ ಪೊಲೀಸರು ನಿರತರಾಗಿದ್ದಾರೆ. ಇದುವರೆಗೆ 500ಕ್ಕೂ ಹೆಚ್ಚು ಪೋಸ್ಟ್‌ಗಳನ್ನು ಅಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಸಂಭಾಜಿನಗರ ಜಿಲ್ಲಾ ಕೇಂದ್ರದಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಖುಲ್ತಾಬಾದ್ ಪಟ್ಟಣದಲ್ಲಿರುವ ಔರಂಗಜೇಬ್‌ನ ಸಮಾಧಿಯನ್ನು ತೆರವುಗೊಳಿಸುವಂತೆ ಆಗ್ರಹಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಸೋಮವಾರ ನಾಗ್ಪುರದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.

ಔರಂಗಜೇಬ್‌ನ ಸಮಾಧಿ ಇರುವ ಪ್ರದೇಶವನ್ನು ಡ್ರೋನ್ ಹಾರಾಟ ನಿಷೇಧ ವಲಯವನ್ನಾಗಿ ಘೋಷಣೆ ಮಾಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರಾಜ್ಯ ಮೀಸಲು ಪೊಲೀಸ್ ಪಡೆ ಸೇರಿದಂತೆ ಇತರೆ ಸಿಬ್ಬಂದಿಯನ್ನು ಪಟ್ಟಣದಲ್ಲಿ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿಲೀಪ್ ಸ್ವಾಮಿ ಮಾಹಿತಿ ನೀಡಿದ್ದಾರೆ.

‘ಯಾರೂ ವದಂತಿಗಳನ್ನು ನಂಬಬಾರದು ಮತ್ತು ಜನರು ಈ ವಿಷಯದ ಬಗ್ಗೆ ಯಾವುದೇ ಮಾಹಿತಿ ಹೊಂದಿದ್ದರೆ ಆಡಳಿತ ಅಥವಾ ಪೊಲೀಸರನ್ನು ಸಂಪರ್ಕಿಸಬೇಕು. ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಪತ್ತೆಹಚ್ಚಲು ಮತ್ತು ಅವುಗಳನ್ನು ಅಳಿಸುವಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ತಂಡವು ದಿನದ 24 ಗಂಟೆಯೂ ಕೆಲಸ ಮಾಡುತ್ತಿದೆ’ ಎಂದು ಅವರು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.