ಚಂಡೀಗಢ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಎನ್‌ಎಸ್‌ಜಿ (ಬ್ಲ್ಯಾಕ್ ಕ್ಯಾಟ್ ಕಮಾಂಡೋ ಪಡೆ) ಪ್ರಾದೇಶಿಕ ಕೇಂದ್ರವನ್ನು ಕೇಂದ್ರ ಸರ್ಕಾರ ಸ್ಥಾಪಿಸಲಿದೆ ಎಂದು ಗೃಹ ಸಚಿವ ಅಮಿತ್ ಶಾ ಮಂಗಳವಾರ ತಿಳಿಸಿದ್ದಾರೆ.
ಭಯೋತ್ಪಾದನಾ ನಿಗ್ರಹ ಕಮಾಂಡೋ ಪಡೆಯ 41ನೇ ಸ್ಥಾಪನಾ ದಿನವನ್ನು ಉದ್ದೇಶಿಸಿ ಮಾತನಾಡಿದ ಶಾ, ಮುಂದಿನ ದಿನಗಳಲ್ಲಿ ಮೋದಿ ಸರ್ಕಾರ ಎನ್‌ಎಸ್‌ಜಿಯ ಕಾರ್ಯನಿರ್ವಹಣೆಯಲ್ಲಿ ಪ್ರಮುಖ ಬದಲಾವಣೆ ತರಲು ಸಜ್ಜಾಗಿದೆ ಎಂದು ಹೇಳಿದ್ದಾರೆ.
ಮುಂಬೈ, ಚೆನ್ನೈ, ಕೋಲ್ಕತ್ತಾ , ಹೈದರಾಬಾದ್ ಮತ್ತು ಗಾಂಧಿನಗರದಲ್ಲಿ ರಾಷ್ಟ್ರೀಯ ಭದ್ರತಾ ಸಿಬ್ಬಂದಿ (ಎನ್‌ಎಸ್‌ಜಿ) ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಅಯೋಧ್ಯೆಯಲ್ಲಿ ಆರನೇ ಕೇಂದ್ರ ಸ್ಥಾಪನೆಯಾಗಲಿದೆ. ಜಮ್ಮುವಿನಲ್ಲಿ 'ಟಾಸ್ಕ್ ಫೋರ್ಸ್' ಸಣ್ಣ ಘಟಕವನ್ನು ಸಹ ಹೊಂದಿದೆ ಎಂದಿದ್ದಾರೆ.
ದೇಶದ ವಿವಿಧ ಭಾಗಗಳಲ್ಲಿರುವ ಎನ್‌ಎಸ್‌ಜಿ ಕಮಾಂಡೋಗಳು ಯಾವುದೇ ತುರ್ತು ಪರಿಸ್ಥಿತಿಯನ್ನು ತಕ್ಷಣ ಮತ್ತು ಪರಿಣಾಮಕಾರಿಯಾಗಿ ನಿಭಾಯಿಸುತ್ತಾರೆ. 24 ಗಂಟೆಗಳ ಕಾಲ ಅವರು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗಿರುತ್ತಾರೆ ಎಂದು ಅಮಿತ್ ಶಾ ತಿಳಿಸಿದ್ದಾರೆ.
ಎನ್‌ಎಸ್‌ಜಿಯಲ್ಲಿ ಕಾರ್ಯನಿರ್ವಹಿಸುವವರನ್ನು ಬ್ಲ್ಯಾಕ್ ಕ್ಯಾಟ್ ' ಕಮಾಂಡೋ ಎಂದು ಕರೆಯುತ್ತಾರೆ. ಭಯೋತ್ಪಾದಕ 2008 ರ 26/11 ಮುಂಬೈ ಭಯೋತ್ಪಾದಕ ದಾಳಿಯ ಬಳಿಕ 2009ರಲ್ಲಿ ವಿವಿಧ ದೇಶದ ವಿವಿಧ ನಗರಗಳಲ್ಲಿ ಎನ್‌ಎಸ್‌ಜಿ ಕೇಂದ್ರವನ್ನು ಸ್ಥಾಪಿಸಲಾಯಿತು.
ಹೆಚ್ಚಿನ ಅಪಾಯವುಳ್ಳ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳಲ್ಲಿ ವಿಶೇಷ ಬ್ಯಾಕಪ್ ಪಡೆಯಾಗಿ ಎನ್‌ಎಸ್‌ಜಿ ಕಾರ್ಯನಿರ್ವಹಿಸುತ್ತದೆ. ಎನ್‌ಎಸ್‌ಜಿ ಭಾರತೀಯ ಸೇನೆ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸಿಬ್ಬಂದಿಯನ್ನು ಒಳಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.