
ನರೇಂದ್ರ ಮೋದಿ
ಅಯೋಧ್ಯೆ: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಪ್ರಬಲ ಸ್ಫೋಟ ಪ್ರಕರಣದ ಬೆನ್ನಲ್ಲೇ ನವೆಂಬರ್ 25ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಎಲ್ಲಾ ಮಸೀದಿಗಳನ್ನು ನಿಯಮಿತವಾಗಿ ತಪಾಸಣೆ ನಡೆಸುವಂತೆ ಮತ್ತು ಸಂದರ್ಶಕರ ವಿವರಗಳನ್ನು ಕಡ್ಡಾಯವಾಗಿ ದಾಖಲಿಸಬೇಕೆಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.
ನಗರದಲ್ಲಿರುವ ಎಲ್ಲಾ ಮದರಸಾಗಳು ಮತ್ತು ಮಸೀದಿಗಳಲ್ಲಿ ಶುಕ್ರವಾರದ ಸಾಮೂಹಿಕ ಪ್ರಾರ್ಥನೆಗಳನ್ನು (ನಮಾಜ್) ತಕ್ಷಣ ನಿಲ್ಲಿಸುವಂತೆ ಕೋರಿ ಬಿಜೆಪಿ ವಕ್ತಾರ ರಜನೀಶ್ ಸಿಂಗ್ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ.
ಎಲ್ಲಾ ಮಸೀದಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಿರಬೇಕು. ಜತೆಗೆ, ದೃಶ್ಯಾವಳಿಗಳು ಸ್ಥಳೀಯ ಪೊಲೀಸರಿಗೆ ತಕ್ಷಣವೇ ಸಿಗುವಂತೆ ವ್ಯವಸ್ಥೆ ಮಾಡಬೇಕು ಎಂದೂ ಅವರು ಒತ್ತಾಯಿಸಿದ್ದಾರೆ.
ದೇಶದಲ್ಲಿ ಭಯೋತ್ಪಾದಕರು ರಹಸ್ಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸಿಕೊಳ್ಳುವ ಮೂಲಕ ತಮ್ಮ ಚಟುವಟಿಕೆಗಳನ್ನು ವಿಸ್ತರಿಸುತ್ತಿದ್ದಾರೆ ಎಂದೂ ಅವರು ಸಿಂಗ್ ಆರೋಪಿಸಿದ್ದಾರೆ.
ನವೆಂಬರ್ 10ರಂದು ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟಗೊಂಡು 15 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ. ತನಿಖಾ ಸಂಸ್ಥೆಯ ಹಲವು ತಂಡಗಳು ಸಂಚುಕೋರರ ಬಂಧನಕ್ಕಾಗಿ ಹಲವು ರಾಜ್ಯಗಳಲ್ಲಿ ಶೋಧ ನಡೆಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.