
ಶಾಸಕ ಹುಮಾಯೂನ್ ಕಬೀರ್
ಕೋಲ್ಕತ್ತ: ಬಾಬರಿ ಮಸೀದಿ ಮಾದರಿಯಲ್ಲೇ ಹೊಸ ಮಸೀದಿ ನಿರ್ಮಾಣದ ಹೇಳಿಕೆ ನೀಡಿದ್ದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶಾಸಕ ಹುಮಾಯೂನ್ ಕಬೀರ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಹುಮಾಯೂನ್ ಕಬೀರ್ ಅವರನ್ನು ಟಿಎಂಸಿಯಿಂದ ಅಮಾನತುಗೊಳಿಸಲಾಗಿದೆ ಎಂದು ಟಿಎಂಸಿ ನಾಯಕ ಮತ್ತು ಕೋಲ್ಕತ್ತ ಮೇಯರ್ ಫಿರ್ಹಾದ್ ಹಕೀಮ್ ಹೇಳಿದ್ದಾರೆ.
ಇತ್ತೀಚೆಗೆ ಶಾಸಕ ಹುಮಾಯೂನ್ ಕಬೀರ್ ಅವರು ಬಾಬರಿ ಮಸೀದಿ ನಿರ್ಮಾಣ ಹೇಳಿಕೆ ನೀಡಿದ್ದರಿಂದ ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಸಂಚಲನ ಸೃಷ್ಟಿಯಾಗಿತ್ತು. ಆಡಳಿತ ಪಕ್ಷದ ಹುನ್ನಾರದಿಂದ ಕೋಮು ಧ್ರುವೀಕರಣದ ಪ್ರಯತ್ನಗಳು ನಡೆಯುತ್ತಿವೆ ಎಂದು ಬಿಜೆಪಿ ಆರೋಪ ಮಾಡಿತ್ತು.
ಇದೇ ಡಿ.6ರಂದು ಬಾಬರಿ ಮಸೀದಿ ನಿರ್ಮಾಣಕ್ಕೆ ಅಡಿಪಾಯ ಹಾಕುವುದಾಗಿ ಘೋಷಿಸಿದ್ದರು. ಅವರ ಈ ನಡೆಯಿಂದ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗಿತ್ತು. ಡ್ಯಾಮೇಜ್ ಕಂಟ್ರೋಲ್ ಮಾಡುವ ಪ್ರಯತ್ನದ ಭಾಗವಾಗಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಈ ಹಿಂದೆ ಕಬೀರ್ ಅವರಿಗೆ ಎಚ್ಚರಿಕೆ ನೀಡಲಾಗಿತ್ತು ಆದರೂ ಅವರು ಪಕ್ಷದ ಸಿದ್ಧಾಂತಗಳನ್ನು ಗಾಳಿಗೆ ತೂರಿ ಪಕ್ಷಕ್ಕೆ ಮುಜುಗರ ಉಂಟಾಗುವಂತೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಹೊರ ಹಾಕಲಾಗಿದೆ ಎಂದರು.
ಮೂಲಗಳ ಪ್ರಕಾರ, ಅವರು ಶುಕ್ರವಾರ ತೃಣಮೂಲ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ, ಹೊಸ ಪಕ್ಷ ಸ್ಥಾಪಿಸಿ, ಮಸೀದಿ ನಿರ್ಮಾಣವನ್ನು ಮುಂದುವರೆಸುವ ಸಾಧ್ಯತೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.