ADVERTISEMENT

ಬಿಬಿಎಂಪಿ ಚುನಾವಣೆ: ಫೆ.25ರಂದು ಅರ್ಜಿ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2025, 23:00 IST
Last Updated 4 ಫೆಬ್ರುವರಿ 2025, 23:00 IST
<div class="paragraphs"><p>ಬಿಬಿಎಂಪಿ&nbsp;</p></div>

ಬಿಬಿಎಂಪಿ 

   

ನವದೆಹಲಿ: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಚುನಾವಣೆಗೆ ಸಂಬಂಧಿಸಿದ ಅರ್ಜಿಯನ್ನು ಇದೇ 25ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಮಂಗಳವಾರ ಒಪ್ಪಿಕೊಂಡಿದೆ.  

ಖಾಸಗಿ ಮಧ್ಯಸ್ಥಗಾರರ ಪರವಾಗಿ ವಕೀಲ ಅನಿಲ್ ಸಿ. ನಿಶಾನಿ ಅವರು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿದರು.

ADVERTISEMENT

ಬಿಬಿಎಂಪಿ ಸದಸ್ಯರ ಅಧಿಕಾರದ ಅವಧಿಯು 2019ರ ಸೆಪ್ಟೆಂಬರ್ 10ರಂದು ಪೂರ್ಣಗೊಂಡಿತ್ತು. ಆರು ವಾರಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ 2020ರ ಡಿಸೆಂಬರ್ 18ರಂದು ಅಮಾನತಿನಲ್ಲಿ ಇರಿಸಿತ್ತು. ಕರ್ನಾಟಕ ಮುನಿಸಿಪಲ್ ಕಾರ್ಪೊರೇಷನ್ (ತಿದ್ದುಪಡಿ) ಕಾಯ್ದೆ– 2020ರ ಅನ್ವಯ ರಚಿಸಲಾಗುವ 243 ವಾರ್ಡ್‌ಗಳ ಬದಲಿಗೆ, ಮೊದಲಿದ್ದ 198 ವಾರ್ಡ್‌ಗಳಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿದ್ದ ಆದೇಶದ ಸಿಂಧುತ್ವ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ತ್ವರಿತಗತಿಯಲ್ಲಿ ಬೆಳೆಯುತ್ತಿರುವ ಬೆಂಗಳೂರು ನಗರದ ಸ್ಥಳೀಯ ಸಂಸ್ಥೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡುವ ಸಂಬಂಧ, ವಾರ್ಡ್‌ಗಳ ಸಂಖ್ಯೆಯನ್ನು 198ರಿಂದ 243ಕ್ಕೆ ಹೆಚ್ಚಿಸಲೆಂದೇ ನೂತನ ಕಾನೂನನ್ನು ಅಂಗೀಕರಿಸಲಾಗಿದೆ ಎಂದು ಮೇಲ್ಮನವಿಯಲ್ಲಿ ಹೇಳಿತ್ತು.

ಅಲ್ಲದೆ, ಹೊಸದಾಗಿ ಜಾರಿಗೊಳಿಸಲಾದ ಕಾಯ್ದೆಯನ್ನು ರಿಟ್ ಅರ್ಜಿಯ ಮೂಲಕ ಪ್ರಶ್ನಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ಯಾವುದೇ ರೀತಿಯ ಅಧಿಕಾರವಿಲ್ಲ ಎಂದೂ ಸರ್ಕಾರ ಹೇಳಿತ್ತು. 

ವಾರ್ಡ್‌ಗಳ ಪುನರ್‌ ವಿಂಗಡಣೆ ಹಾಗೂ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿ ಅಂತಿಮಗೊಳಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ ಕೂಡಲೇ ಬಿಬಿಎಂಪಿಯ ಚುನಾವಣೆ ನಡೆಸುವಂತೆ ಕರ್ನಾಟಕ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮೇ 20ರಂದು ಸೂಚಿಸಿತ್ತು. ಬಿಬಿಎಂಪಿಯ ವಾರ್ಡ್‌ಗಳ ಪುನರ್‌ ವಿಂಗಡಣೆ ಮತ್ತು ಒಬಿಸಿ ಮೀಸಲಾತಿ ನಿರ್ಣಯದ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರಕ್ಕೆ ಎಂಟು ವಾರಗಳ ಕಾಲಾವಕಾಶ ನೀಡಿತ್ತು.  ವಾರ್ಡ್‌ಗಳ ಮೀಸಲಾತಿಯ ಅಧಿಸೂಚನೆಯನ್ನು ವಾರದೊಳಗೆ ಪ್ರಕಟಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ 2022ರಲ್ಲಿ ನಿರ್ದೇಶನ ನೀಡಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.