ಭಂಡಾರ: ಮಹಾರಾಷ್ಟ್ರದ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಆಸ್ಪತ್ರೆಯ ಸಿಬ್ಬಂದಿಯೇ ಕಾರಣ ಎಂದು ತಮ್ಮ ಮಕ್ಕಳನ್ನು ಕಳೆದುಕೊಂಡ ಪೋಷಕರು ಆರೋಪಿಸಿದ್ದಾರೆ.
ಮಹಾರಾಷ್ಟ್ರದ ಭಂಡಾರ ಆಸ್ಪತ್ರೆಯ ನವಜಾತ ಶಿಶು ನಿಗಾ ಘಟಕದಲ್ಲಿ ಶನಿವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ 10 ನವಜಾತ ಶಿಶುಗಳು ಮೃತಪಟ್ಟಿದ್ದವು.
ತಮ್ಮ ಎರಡು ತಿಂಗಳ ಮಗುವನ್ನು ಕಳೆದುಕೊಂಡ ಗೀತಾ ಮತ್ತು ವಿಶ್ವನಾಥ ಬೆಹೆರೆ ದಂಪತಿ, ‘ಆಸ್ಪತ್ರೆ ಸಿಬ್ಬಂದಿ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ್ದರಿಂದ ಈ ಅವಘಡ ಸಂಭವಿಸಿದೆ’ ಎಂದು ಆರೋಪಿಸಿದ್ದಾರೆ.
‘ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ವೇಳೆಯಲ್ಲಿ ಆಸ್ಪತ್ರೆಯಯಾವುದೇ ಸಿಬ್ಬಂದಿ ಉಪಸ್ಥಿತರಿರಲಿಲ್ಲ. ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಅವರು ಆಗ್ರಹಿಸಿದ್ದಾರೆ.
ಜ. 3ರಂದು ಪಹೇಲಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಂದನಾ ಎಂಬುವರಿಗೆ ಹೆಣ್ಣುಮಗು ಜನಿಸಿತ್ತು. ತೂಕ ಅತಿಕಡಿಮೆ ಇದ್ದ ಕಾರಣ ಶಿಶು ಮತ್ತು ತಾಯಿಯನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಆಸ್ಪತ್ರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಗು ಕಳೆದುಕೊಂಡ ವಂದನಾ ಬಂಧುಗಳು ಆಗ್ರಹಿಸಿದ್ದಾರೆ.
ಈಗಾಗಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಈ ಘಟನೆ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಅಲ್ಲದೇ ಅವರು ಸಂತ್ರಸ್ತ ಕುಟುಂಬ ಮತ್ತು ಆಸ್ಪತ್ರೆ ಅಧಿಕಾರಿಗಳನ್ನೂ ಭೇಟಿಯಾಗಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.