
ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಇಂಡಿಯಾ ಮೈತ್ರಿಕೂಟ ಚುನಾವಣಾ ಕಾರ್ಯತಂತ್ರವನ್ನು ರೂಪಿಸಿದ್ದು, ಇದರ ಭಾಗವಾಗಿಯೇ ಲೋಕಸಭೆ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅಕ್ಟೋಬರ್ 29ರಂದು (ಬುಧವಾರ) ರಾಹುಲ್ ಗಾಂಧಿ ಅವರು ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗಳ ಪರ ಚುನಾವಣಾ ರ್‍ಯಾಲಿ ನಡೆಸಲಿದ್ದಾರೆ.
ಮುಜಾಫರ್‌ಪುರ ಮತ್ತು ದರ್ಭಾಂಗ ಜಿಲ್ಲೆಗಳಲ್ಲಿ ರಾಹುಲ್ ರ್‍ಯಾಲಿ ನಡೆಸಿ, ಸಾರ್ವಜನಿಕ ಸಮಾವೇಶವನ್ನು ಉದ್ದೇಶಸಿ ಮಾತನಾಡಲಿದ್ದಾರೆ. ಈ ಮೂಲಕ ಬಿಹಾರ ವಿಧಾನಸಭೆಗೆ ಚುನಾವಣಾ ಪ್ರಚಾರವನ್ನು ಆರಂಭಿಸಲಿದ್ದಾರೆ.
ರಾಹುಲ್ ಅವರು ಮೊದಲು ಮುಜಾಫರ್‌ಪುರದ ಮೀಸಲು ಕ್ಷೇತ್ರ ಸಕ್ರಾದ ಅಭ್ಯರ್ಥಿ ಉಮೇಶ್ ರಾಮ್ ಪರ ಪ್ರಚಾರ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಜೇಶ್ ರಾಥೋಡ್ ತಿಳಿಸಿದ್ದಾರೆ.
ಈ ವೇಳೆ ರಾಹುಲ್ ಜತೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕೂಡ ಭಾಗವಹಿಸುವ ನಿರೀಕ್ಷೆಯಿದೆ ಎಂದು ರಾಥೋಡ್ ಹೇಳಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆಯು ನವೆಂಬರ್ 6 ಮತ್ತು 11ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ 14ರಂದು ಫಲಿತಾಂಶ ಹೊರಬೀಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.