
ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಮವಾರ ದೆಹಲಿಯಲ್ಲಿ ಭೇಟಿ ಮಾಡಿದರು.
ಬಿಹಾರದಲ್ಲಿ ನಿತೀಶ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಒಂದು ತಿಂಗಳ ಬಳಿಕ ಈ ಭೇಟಿ ನಡೆದಿದೆ.
ನಿತೀಶ್ ಜೊತೆ ಬಿಜೆಪಿ ನಾಯಕ ಮತ್ತು ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ, ಜೆಡಿಯು ನಾಯಕ ಮತ್ತು ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್ ಅವರು ಪ್ರಧಾನಿ ಅವರನ್ನು ಭೇಟಿ ಮಾಡಿದ್ದಾರೆ.
ಪ್ರಧಾನಿ ಜೊತೆಗಿನ ಮಾತುಕತೆ ಬಳಿಕ ಪ್ರತಿಕ್ರಿಯಿಸಿದ ಚೌಧರಿ ಅವರು, ‘ವಿಶ್ವದ ಪ್ರಭಾವಿ ನಾಯಕ ಮೋದಿ ಅವರ ಜೊತೆ ಔಪಚಾರಿಕ ಮಾತುಕತೆ ನಡೆಸಿದ್ದೇವೆ. ಬಿಹಾರ ಅಭಿವೃದ್ಧಿಗೆ ಬೇಕಾದ ಮೌಲ್ಯಯುತ ಸಲಹೆಗಳನ್ನು ಮೋದಿ ಅವರು ನೀಡಿದ್ದಾರೆ’ ಎಂದು ತಿಳಿಸಿದರು.
ಮೋದಿ ಭೇಟಿಗೂ ಮೊದಲು ನಿತೀಶ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.
ಎನ್‌ಡಿಎ ನಾಯಕರ ಭೇಟಿಯ ವೇಳೆ ನಿತೀಶ್ ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಮಾತುಕತೆ ನಡೆಸಿರುವ ಸಾಧ್ಯತೆಯಿದೆ. ಮಕರ ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆಯಿದೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ನಿತೀಶ್ ಕುಮಾರ್ ಅವರು ಎನ್‌ಡಿಎ ನಾಯಕರೊಂದಿಗೆ ಮಾತುಕತೆ ನಡೆಸುವ ಸಾಧ್ಯತೆಯಿದೆ. ಮಕರ ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆ ಪ್ರಕ್ರಿಯೆ ನಡೆಯುವ ನಿರೀಕ್ಷೆಯಿದೆ.
243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನವೆಂಬರ್‌ನಲ್ಲಿ ಚುನಾವಣೆ ನಡೆದಿದ್ದು, ಎನ್‌ಡಿಎ ಮೈತ್ರಿಕೂಟ 202 ಸ್ಥಾನಗಳನ್ನು ಗೆದ್ದು 10ನೇ ಅವಧಿಗೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.
ಎನ್‌ಡಿಎ ಮೈತ್ರಿಕೂಟದಲ್ಲಿ ಬಿಜೆಪಿ 89 ಸ್ಥಾನಗಳನ್ನು ಗೆದ್ದಿತು, ಜೆಡಿಯು 85 ಸ್ಥಾನ, ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) 19 ಸ್ಥಾನ, ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಐದು ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ನಾಲ್ಕು ಸ್ಥಾನಗಳನ್ನು ಗೆದ್ದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.