ಚುನಾವಣಾ ಆಯೋಗ
ನವದೆಹಲಿ: ಬಿಹಾರದಲ್ಲಿ ವಿಧಾನಸಭಾ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಲು ಚುನಾವಣಾ ಆಯೋಗವು (ಇಸಿ) ಮುಂದಿನ ವಾರಾಂತ್ಯಕ್ಕೆ ಭೇಟಿ ನೀಡಲಿದೆ. ಇದು ಚುನಾವಣಾ ವೇಳಾಪಟ್ಟಿಯ ಅಧಿಕೃತ ಘೋಷಣೆಗೆ ಕ್ಷಣಗಣನೆ ಆರಂಭವಾಗಿರುವುದನ್ನು ಸೂಚಿಸುತ್ತದೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಅ.4 ಮತ್ತು 5ರಂದು ಪಟ್ನಾದಲ್ಲಿ ಇರಲಿದ್ದು, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮತ್ತು ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ನ.22ರ ಮೊದಲು ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾ ಆಯೋಗ ಪೂರ್ಣಗೊಳಿಸಬೇಕು. ಅ.5ರ ನಂತರ ಯಾವುದೇ ಸಮಯದಲ್ಲಿ ಬಿಹಾರ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ.
ಚುನಾವಣಾ ಆಯೋಗ ನೇಮಿಸಿದ ವೀಕ್ಷಕರ ಸಭೆಯನ್ನು ಅ.3ರಂದು ದೆಹಲಿಯ ದ್ವಾರಕಾದಲ್ಲಿರುವ ಇಂಡಿಯಾ ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡೆಮಾಕ್ರಸಿ ಅಂಡ್ ಎಲೆಕ್ಷನ್ ಮ್ಯಾನೇಜ್‌ಮೆಂಟ್‌ನಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿವಾದಕ್ಕೆ ಕಾರಣವಾಗಿದ್ದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ನಂತರ, ರಾಜ್ಯದಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟವಾದ ಕೆಲ ದಿನಗಳ ಬಳಿಕ ಚುನಾವಣಾ ಆಯೋಗವು ಬಿಹಾರಕ್ಕೆ ಭೇಟಿ ನೀಡಲಿದೆ. ಕರಡು ಪಟ್ಟಿಯಲ್ಲಿ 7.24 ಕೋಟಿ ಮತದಾರರಿದ್ದು, ವಿವಿಧ ಕಾರಣಗಳಿಗಾಗಿ ಸುಮಾರು 65 ಲಕ್ಷ ಹೆಸರುಗಳನ್ನು ಕೈಬಿಡಲಾಗಿದೆ.
ಸೆ.1ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶವಿದ್ದು, ಬಳಿಕ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.