
ಪಟ್ನಾ: ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆಯುತ್ತಿರುವ ಸಮಾರಂಭದಲ್ಲಿ ರಾಜ್ಯಪಾಲ ಮೊಹಮ್ಮದ್ ಆರಿಫ್ ಖಾನ್ ಅವರು ನಿತೀಶ್ ಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರು ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಸೇರಿದಂತೆ ಹಲವರು ನಾಯಕರು ಸಮಾರಂಭದಲ್ಲಿ ಭಾಗವಹಿಸಿದ್ದಾರೆ.
ಎನ್‌ಡಿಎ ಮೈತ್ರಿಕೂಟದ ಸದಸ್ಯ ಪಕ್ಷಗಳ ಜಂಟಿ ಸಭೆಯಲ್ಲಿ ನಿತೀಶ್ ಕುಮಾರ್ ಅವರನ್ನು ಎನ್‌ಡಿಎ ಶಾಸಕಾಂಗ ಪಕ್ಷದ (ಎನ್‌ಡಿಎಎಲ್‌ಪಿ) ನಾಯಕನನ್ನಾಗಿ ಬುಧವಾರ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಅದರ ಬೆನ್ನಲ್ಲೇ ಅವರು, ರಾಜ್ಯಪಾಲ ಮೊಹಮ್ಮದ್ ಖಾನ್ ಅವರನ್ನು ಸಂಜೆ ಭೇಟಿಯಾಗಿ ನಿರ್ಗಮಿತ ಸರ್ಕಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದಕ್ಕೂ ಮುನ್ನ ನಿತೀಶ್ ಅವರನ್ನು ಜೆಡಿಯು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿತ್ತು.
ಮತ್ತೊಂದೆಡೆ, ಬಿಜೆಪಿ ನಾಯಕರ ಸಭೆಯಲ್ಲಿ ಸಾಮ್ರಾಟ್ ಚೌಧರಿ ಅವರನ್ನು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕನನ್ನಾಗಿ, ವಿಜಯ್ ಸಿನ್ಹಾ ಅವರನ್ನು ಉಪನಾಯಕನನ್ನಾಗಿ ಆರಿಸಲಾಗಿತ್ತು. ಈ ಇಬ್ಬರೂ ನಾಯಕರು ನಿರ್ಗಮಿತ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಗಳಾಗಿದ್ದರು.
ನವೆಂಬರ್ 6 ಮತ್ತು 11ರಂದು ನಡೆದ ಎರಡು ಹಂತಗಳ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ–ನಿತೀಶ್ ಕುಮಾರ್ ಜೋಡಿಯ ಪ್ರಭಾವಳಿಯ ನೆರವಿನಿಂದ ಎನ್‌ಡಿಎ ಮೈತ್ರಿಕೂಟವು 243 ಕ್ಷೇತ್ರಗಳ ಪೈಕಿ 203 ಸ್ಥಾನಗಳನ್ನು ಗೆದ್ದು ಬೀಗಿದೆ. ಇತ್ತ ಕಾಂಗ್ರೆಸ್–ಆರ್‌ಜೆಡಿ ನೇತೃತ್ವದ ‘ಮಹಾಘಟಬಂಧನ್’ 34 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಷ್ಟೇ ಶಕ್ತವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.