ನಿತೀಶ್ ಕುಮಾರ್ ಮತ್ತು ಚಿರಾಗ್ ಪಾಸ್ವಾನ್
–ಪಿಟಿಐ ಚಿತ್ರಗಳು
ಪಟ್ನಾ: ಬಿಹಾರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಕೇಂದ್ರ ಸಚಿವ, ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅವರು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಭಾಗವಾಗಿರುವ ಪಾಸ್ವಾನ್ ಅವರು ಪಟ್ನಾದಲ್ಲಿ ನಡೆದ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.
‘ಬಿಹಾರದಲ್ಲಿ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸುವಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ನಿತೀಶ್ ಸರ್ಕಾರವನ್ನು ಬೆಂಬಲಿಸುವ ಬಗ್ಗೆ ವಿಷಾದವಿದೆ. ರಾಜ್ಯದಲ್ಲಿ ಪ್ರತಿದಿನ ಕೊಲೆಗಳು ನಡೆಯುತ್ತಿವೆ. ಅಪರಾಧಿಗಳು ಕಾನೂನಿಗೆ ಸವಾಲುವೊಡ್ಡಿದ್ದಾರೆ’ ಎಂದು ಹೇಳಿದ್ದಾರೆ.
‘ಅಪರಾಧಿಗಳ ನೈತಿಕ ಸ್ಥೈರ್ಯ ಹೆಚ್ಚಿದೆ. ವಿಧಾನಸಭೆ ಚುನಾವಣೆಗೆ ಮುನ್ನ ಅಪರಾಧ ಕೃತ್ಯಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆದರೆ, ಈ ವಿಚಾರದಲ್ಲಿ ವಿಫಲವಾಗುತ್ತಿರುವ ಸರ್ಕಾರವನ್ನು ಬೆಂಬಲಿಸಲು ನನಗೆ ವಿಷಾದವಿದೆ’ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಹಿಂಸಾತ್ಮಕ ಪ್ರಕರಣಗಳು ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ್ದಾಗಿವೆ ಎಂದು ಕೆಲವರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಆಡಳಿತದ ಜವಾಬ್ದಾರಿಯಾಗಿದೆ ಎಂದಿದ್ದಾರೆ.
ಬಿಹಾರದಲ್ಲಿ ವರ್ಷಾಂತ್ಯಕ್ಕೆ ವಿಧಾನಸಭೆ ಚುನಾವಣೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.