ಸಾಂದರ್ಭಿಕ ಚಿತ್ರ
– ಐಸ್ಟಾಕ್ ಚಿತ್ರ
ಪಟ್ನಾ: ಬಿಹಾರದ ಸಸಾರಾಮ್ ವಿಧಾನಸಭಾ ಕ್ಷೇತ್ರದಿಂದ ಸೋಮವಾರ ನಾಮಪತ್ರ ಸಲ್ಲಿಸಿದ ಕೆಲವೇ ಹೊತ್ತಿನಲ್ಲಿ ಆರ್‌ಜೆಡಿ ಅಭ್ಯರ್ಥಿ ಸತೇಂದ್ರ ಸಾಹ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಸತೇಂದ್ರ ವಿರುದ್ಧ ಜಾಮೀನು ರಹಿತ ವಾರಂಟ್ (ಎನ್‌ಬಿಡಬ್ಲ್ಯೂ) ಬಾಕಿ ಇರುವುದರಿಂದ ಜಾರ್ಖಂಡ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
‘ಸತೇಂದ್ರ ಅವರು ಸಸಾರಾಮ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲು ಬಂದಿದ್ದ ಕಚೇರಿ ಬಳಿ ಜಾರ್ಖಂಡ್ ಪೊಲೀಸರು ಬೀಡು ಬಿಟ್ಟಿದ್ದರು. ಸತೇಂದ್ರ ನಾಮಪತ್ರ ಸಲ್ಲಿಕೆ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕ ಬೆನ್ನಲ್ಲೇ ಎನ್‌ಬಿಡಬ್ಲ್ಯೂ ಆಧರಿಸಿ ಕೂಡಲೇ ಅವರನ್ನು ಬಂಧಿಸಲಾಯಿತು’ ಎಂದು ರೋಹ್ತಾಸ್ ಜಿಲ್ಲೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
2004ರಲ್ಲಿ ಜಾರ್ಖಂಡ್‌ನ ಗರ್ಹ್ವಾ ಜಿಲ್ಲೆಯ ಚಿರೌಂಜಿಯಾ ಮೋರ್‌ನಲ್ಲಿ ನಡೆದಿದ್ದ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಸತೇಂದ್ರ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ಪ್ರಕರಣ ಸಂಬಂಧ 2018ರಲ್ಲಿ ಸತೇಂದ್ರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು. ವಿವಿಧ ಪೊಲೀಸ್ ಠಾಣೆಗಳಲ್ಲಿ ಅವರ ವಿರುದ್ಧ ದರೋಡೆ ಸೇರಿದಂತೆ ಶಸ್ತ್ರಾಸ್ತ್ರ ಕಾಯ್ದೆಯ ಉಲ್ಲಂಘನೆಗೆ ಸಂಬಂಧಿಸಿದ 20ಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಇವೆ ಎಂದು ಜಾರ್ಖಂಡ್‌ನ ಗರ್ಹ್ವಾದ ಸದರ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನಿಲ್ ತಿವಾರಿ ಮಾಹಿತಿ ನೀಡಿದ್ದಾರೆ.
243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 14ರಂದು ಮತ ಎಣಿಕೆ ನಡೆಯಲಿದೆ.
ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯನ್ನು ಬಂಧಿಸಿದ ಮೂರನೇ ಪ್ರಕರಣ ಇದಾಗಿದೆ. ಇದಕ್ಕೂ ಮೊದಲು, ಭೋರೆ ಮತ್ತು ದರೌಲಿ ಕ್ಷೇತ್ರಗಳಿಂದ ನಾಮಪತ್ರ ಸಲ್ಲಿಸಿದ್ದ ಸಿಪಿಐ (ಎಂಎಲ್) ಅಭ್ಯರ್ಥಿಗಳಾದ ಜಿತೇಂದ್ರ ಪಾಸ್ವಾನ್ ಮತ್ತು ಸತ್ಯದೇವ್ ರಾಮ್ ಅವರನ್ನು ಪೊಲೀಸರು ಬಂಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.