ADVERTISEMENT

ದೆಹಲಿ ಬಾಲಕಿ ಸಾವಿನ ಪ್ರಕರಣ: ರಾಹುಲ್ ವಿರುದ್ಧ ಹರಿಹಾಯ್ದ ಬಿಜೆಪಿ

ಪಿಟಿಐ
Published 4 ಆಗಸ್ಟ್ 2021, 12:02 IST
Last Updated 4 ಆಗಸ್ಟ್ 2021, 12:02 IST
ಸಂಬಿತ್ ಪಾತ್ರ
ಸಂಬಿತ್ ಪಾತ್ರ   

ನವದೆಹಲಿ: ನೈರುತ್ಯ ದೆಹಲಿಯಲ್ಲಿ ನಡೆದಿರುವ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಸಾವಿನ ಪ್ರಕರಣವನ್ನು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ತಮ್ಮ ರಾಜಕೀಯ ಅಜೆಂಡವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ ಸಂಬೀತ್‌ ಪಾತ್ರ, ‘ರಾಹುಲ್ ಗಾಂಧಿಯವರು ಸಂತ್ರಸ್ತ ಬಾಲಕಿಯ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಅವರಿಗೆ ನ್ಯಾಯ ಸಿಗಬೇಕು‘ ಎಂದು ಒತ್ತಾಯಿಸಿದ್ದಾರೆ. ಈ ವಿಚಾರದಲ್ಲಿ ರಾಹುಲ್ ಗಾಂಧಿಯವರ ಈ ಬಗ್ಗೆ ನಮ್ಮ ತಕರಾರಿಲ್ಲ. ಆದರೆ, ಕಾಂಗ್ರೆಸ್‌ ಆಡಳಿತವಿರುವ ರಾಜಸ್ಥಾನ, ಪಂಜಾಬ್‌ ಮತ್ತು ಛತ್ತೀಸ್‌ಗಡ ರಾಜ್ಯಗಳಲ್ಲೂ ದಲಿತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ನಡೆದಾಗ ಒಂದೇ ಒಂದು ಟ್ವೀಟ್‌ ಮಾಡುವುದಿಲ್ಲ, ಪ್ರತಿಕ್ರಿಯೆ ನೀಡುವುದಿಲ್ಲ. ಕಾಂಗ್ರೆಸ್‌ನವರ ಇಂಥ ‘ಆಯ್ಕೆ ಸಿದ್ಧಾಂತ‘ ಖಂಡನಾರ್ಹ ಎಂದು ಹೇಳಿದ್ದಾರೆ.

ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸುವುದು ಕಾನೂನು ರೀತ್ಯಾ ಅಪರಾಧವಾಗಿದೆ. ಆದರೆ, ರಾಹುಲ್ ಗಾಂಧಿಯವರು ಸಂತ್ರಸ್ತೆಯ ಕುಟುಂಬದವರ ಫೋಟೊಗಳನ್ನು ಟ್ವೀಟ್‌ ಮಾಡುವ ಮೂಲಕ ಲೈಂಗಿಕ ದೌರ್ಜನ್ಯದಿಂದ ಮಕ್ಕಳನ್ನು ರಕ್ಷಿಸುವ ‘ಪೋಕ್ಸೊ‘ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ ಎಂದು ಅವರು ಆರೋಪಿಸಿದರು.

ADVERTISEMENT

ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನೋಟಿಸ್ ನೀಡಬೇಕೆಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.