ADVERTISEMENT

ದೆಹಲಿಯಲ್ಲಿ ಇಂದು ಮೋದಿ–ಶಾ ಸಮಕ್ಷಮ ಬಿಜೆಪಿ ಮುಖ್ಯಮಂತ್ರಿಗಳ ಸಭೆ

ಚುನಾವಣೆಗೆ ರಣತಂತ್ರ ಹೆಣೆಯಲು ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2018, 3:46 IST
Last Updated 28 ಆಗಸ್ಟ್ 2018, 3:46 IST
ಮೋದಿ ಮತ್ತು ಅಮಿತ್‌ ಶಾ
ಮೋದಿ ಮತ್ತು ಅಮಿತ್‌ ಶಾ   

ನವದೆಹಲಿ: ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಬಿಜೆಪಿ ನಗರದಲ್ಲಿ ಮಂಗಳವಾರ (ಇಂದು) ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಆಯೋಜಿಸಿದೆ. ಸಭೆಯಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರದಲ್ಲಿರುವ ರಾಜ್ಯಗಳ ಉಪಮುಖ್ಯಮಂತ್ರಿಗಳೂ ಪಾಲ್ಗೊಳ್ಳಲಿದ್ದಾರೆ.

ಸಭೆಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಅಧ್ಯಕ್ಷ ಅಮಿತ್‌ ಶಾ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಇರುವ ಸಮಸ್ಯೆಗಳು ಮತ್ತು ಲೋಕಸಭೆ ಚುನಾವಣೆ ಎದುರಿಸಲು ಮಾಡಿಕೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಲಿದ್ದಾರೆ.

ದೇಶದ ಒಟ್ಟು 15 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಆಡಳಿತ ಪಕ್ಷಗಳಿಗೆ ಬೆಂಬಲ ನೀಡಿದೆ. ಈ ರಾಜ್ಯಗಳಲ್ಲಿ ಬಿಜೆಪಿಗೆ ಸೇರಿದವರು ಉಪಮುಖ್ಯಮಂತ್ರಿಗಳಾಗಿದ್ದಾರೆ.

ADVERTISEMENT

ಸಭೆಯಲ್ಲಿ ಪಾಲ್ಗೊಳ್ಳುವ ಎಲ್ಲ ಮುಖ್ಯಮಂತ್ರಿಗಳೂ ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳ ತಾಲ್ಲೂಕು ಮಟ್ಟದ ಪಟ್ಟಿ ನೀಡಬೇಕು ಎಂದು ಹೇಳಲಾಗಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಸಾಮಾಜಿಕ ಭದ್ರತಾ ಯೋಜನೆಗಳಿಂದ ಒಟ್ಟು 22 ಕೋಟಿ ಜನರಿಗೆ ಅನುಕೂಲವಾಗಿದೆ. ಇವರೆಲ್ಲರನ್ನೂ ಸಂಪರ್ಕಿಸಿ ಮುಂದಿನ ಚುನಾವಣೆಗೆ ಬೆಂಬಲ ಕೋರುವುದು ಪಕ್ಷದ ಉದ್ದೇಶ.

‘ಬಿಜೆಪಿ ಒಟ್ಟು 11 ಕೋಟಿ ಸದಸ್ಯ ಬಲ ಹೊಂದಿದೆ. ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳು ಬಿಜೆಪಿ ಪರವಾಗಿ ಮತ ಚಲಾಯಿಸಿದರೆ ಬಿಜೆಪಿಯು 2014ರಲ್ಲಿ ಪಡೆದಿದ್ದಕ್ಕಿಂತಲೂ ಹೆಚ್ಚು ಸ್ಥಾನಗಳೊಂದಿಗೆ 2019ರಲ್ಲಿ ಅಧಿಕಾರಕ್ಕೆ ಬರಲಿದೆ. ಮುಖ್ಯಮಂತ್ರಿಗಳ ಸಭೆ ಈ ಎಲ್ಲ ವಿಷಯಗಳನ್ನು ಚರ್ಚಿಸಲಿದೆ’ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಉಲ್ಲೇಖಿಸಿದೆ.

ಬಿಪಿಎಲ್ ಕುಟುಂಬಗಳಿಗೆ ಉಚಿತ ಎಲ್‌ಪಿಜಿ ಸಿಲಿಂಡರ್‌, ಎಲ್ಲರಿಗೂ ಬ್ಯಾಂಕಿಂಗ್ ವ್ಯವಸ್ಥೆ, ನವೋದ್ಯಮಿಗಳಿಗೆ ಸಾಲ, ಪರಿಶಿಷ್ಟ ಜಾತಿಗೆ ಸೇರಿದ ಯುವಕರಿಗೆ ಸ್ವ–ಉದ್ಯೋಗ ಆರಂಭಿಸಲು ಬಿಜೆಪಿ ಸರ್ಕಾರದ ಮುಖ್ಯ ಸಾಮಾಜಿಕ ಭದ್ರತಾ ಯೋಜನೆಗಳಾಗಿವೆ. ಸಭೆಗೆ ಬರಲಿರುವ ಎಲ್ಲಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗೂ ವರದಿಯೊಂದಿಗೆ ಬರಲು ಸೂಚಿಸಲಾಗಿದೆ.

ಉತ್ತರ ಪ್ರದೇಶ, ಮಹಾರಾಷ್ಟ್ರಗಳಲ್ಲಿ ಬಿಜೆಪಿಯು ವಿರೋಧಿಗಳ ಒಗ್ಗಟ್ಟಿನ ಬಿಸಿ ಅನುಭವಿಸುತ್ತಿದೆ. ಮಧ್ಯಪ್ರದೇಶ, ಛತ್ತೀಸಗಡ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ನೇರ ಎದುರಾಳಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.