ಪ್ರಿಯಾಂಕಾ ಗಾಂಧಿ ವಾದ್ರಾ, ರೇವಂತ್ ರೆಡ್ಡಿ, ರಾಹುಲ್ ಗಾಂಧಿ
(ಪಿಟಿಐ ಚಿತ್ರ)
ಸುಪೌಲ್: ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಸಂಬಂಧ ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ವಾಗ್ದಾಳಿ ನಡೆಸಿದ್ದಾರೆ.
'ಜನರ ನಂಬಿಕೆಯನ್ನು ಕಳೆದುಕೊಂಡಿರುವ ಬಿಜೆಪಿ, ದೇಶದಾದ್ಯಂತ ಮತ ಕಳ್ಳತನಕ್ಕೆ ಸಂಚು ನಡೆಸುತ್ತಿದೆ' ಎಂದು ಅವರು ಆರೋಪಿಸಿದ್ದಾರೆ.
ಬಿಹಾರದಲ್ಲಿ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ಮತದಾರರ ಅಧಿಕಾರ ಯಾತ್ರೆ 10ನೇ ದಿನಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ಬಿಹಾರದ ಸುಪೌಲ್‌ನಲ್ಲಿ ರಾಹುಲ್ ಅವರೊಂದಿಗೆ ಸಹೋದರಿ ಪ್ರಿಯಾಂಕಾ ಪಾಲ್ಗೊಂಡಿದ್ದಾರೆ.
'ಬಿಹಾರದಲ್ಲಿ ಬಿಜೆಪಿ-ಜೆಡಿ(ಯು) ನೇತೃತ್ವದ ಸರ್ಕಾರವು ಎಲ್ಲ ಹಂತದಲ್ಲೂ ವೈಫಲ್ಯವನ್ನು ಕಂಡಿದೆ. ರಾಜ್ಯದಲ್ಲಿ ಹಣದುಬ್ಬರ, ನಿರುದ್ಯೋಗ, ವಲಸೆ, ಆರ್ಥಿಕ ಬಿಕ್ಕಟ್ಟು ಕಾಡುತ್ತಿದೆ. ಈಗ ಜನರ ಮತಗಳ ಕಳ್ಳತನದ ಮೂಲಕ ಅಧಿಕಾರದಲ್ಲಿ ಉಳಿಸಿಕೊಳ್ಳಲು ಸಂಚು ರೂಪಿಸುತ್ತಿದೆ. ಸರ್ಕಾರದ ಮೇಲಿನ ವಿಶ್ವಾಸವನ್ನು ಜನರು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ' ಎಂದು ಅವರು ಆರೋಪಿಸಿದ್ದಾರೆ.
'ಲಕ್ಷಾಂತರ ಬಡ ಹಾಗೂ ವಂಚಿತ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ದೇಶದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಮತದಾನದ ಹಕ್ಕನ್ನು ನೀಡಿದೆ. ಅದನ್ನು ಕಸಿದುಕೊಳ್ಳಲು ಯಾವ ಕಾರಣಕ್ಕೂ ಬಿಡುವುದಿಲ್ಲ' ಎಂದು ಹೇಳಿದ್ದಾರೆ.
ಆಗಸ್ಟ್ 17ರಂದು ಆರಂಭವಾಗಿರುವ 'ಮತದಾರರ ಅಧಿಕಾರ ಯಾತ್ರೆ'ಯು ಸೆಪ್ಟೆಂಬರ್ 1ರಂದು ಪಟ್ನಾದಲ್ಲಿ ಅಂತ್ಯಗೊಳ್ಳಲಿದೆ. ಈ ವೇಳೆ 1,300 ಕಿ.ಮೀ. ದೂರವನ್ನು ಕ್ರಮಿಸಲಿದೆ.
ಬಿಹಾರದಲ್ಲಿ ವಿಧಾನಸಭೆ ಚುನಾವಣೆ ವರ್ಷಾಂತ್ಯದಲ್ಲಿ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.