ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆ ನವದೆಹಲಿ ಕ್ಷೇತ್ರದಲ್ಲಿ ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಚುನಾವಣಾ ಅಧಿಕಾರಿಗಳಿಗೆ ಪ್ರತಿಸ್ಪರ್ಧಿ ಅಭ್ಯರ್ಥಿ ಪರ್ವೇಶ್ ದೂರು ನೀಡಿದ್ದಾರೆ.
ನವದೆಹಲಿ ಕ್ಷೇತ್ರದಲ್ಲಿ ಅರವಿಂದ ಕೇಜ್ರಿವಾಲ್ ಅವರು ಮತದಾರರಿಗೆ ಹಣ, ಸೀರೆಗಳು, ಮತ್ತು ಕುರ್ಚಿಗಳು ಸೇರಿದಂತೆ ಇತರೆ ವಸ್ತುಗಳನ್ನು ಹಂಚುತ್ತಿದ್ದಾರೆ ಎಂದು ಆರೋಪಿಸಿ ಎಎಪಿ ಮತ್ತು ಕೇಜ್ರಿವಾಲ್ ವಿರುದ್ಧ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಪೊಲೀಸರು ಮತ್ತು ಚುನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.
ಸ್ಥಳೀಯ ನಿವಾಸಿ ಕಲ್ಯಾಣ ಸಂಘಗಳಿಗೆ (ಆರ್‌ಡಬ್ಲ್ಯೂಎ) ಕುರ್ಚಿಗಳು ಸೇರಿದಂತೆ ಇತರೆ ವಸ್ತುಗಳನ್ನು ವಿತರಿಸಲು ತಮ್ಮ ಪಕ್ಷದ ಕಾರ್ಯಕರ್ತರನ್ನು ಕಳುಹಿಸಿದ್ದಾರೆ. ಈ ಮೂಲಕ ಮತದಾರರ ಮೇಲೆ ಪ್ರಭಾವ ಬೀರಿದ್ದಾರೆ ಎಂದು ವರ್ಮಾ ಆರೋಪಿಸಿದ್ದಾರೆ.
ಮತದಾರರಿಗೆ ವಸ್ತುಗಳನ್ನು ಹಂಚುವಂತೆ ಕೇಜ್ರಿವಾಲ್ ತಿಳಿಸಿರುವುದಾಗಿ ಎಎಪಿ ಕಾರ್ಯಕರ್ತ ಒಪ್ಪಿಕೊಂಡಿರುವ ವಿಡಿಯೊ ಇದೆ ಎಂದೂ ವರ್ಮಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
70 ಸದಸ್ಯರ ಬಲ ಹೊಂದಿರುವ ದೆಹಲಿ ವಿಧಾನಸಭೆ ಚುನಾವಣೆಗೆ ಫೆಬ್ರುವರಿ 5ರಂದು ಚುನಾವಣೆ ನಡೆಯಲಿದ್ದು, ಫೆಬ್ರುವರಿ 8ರಂದು ಫಲಿತಾಂಶ ಹೊರಬೀಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.