ಜೈಪುರ: ರಾಜಸ್ಥಾನದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ಆಡಳಿತದ ಮೇಲೆ ನಿಯಂತ್ರಣ ಕಳೆದುಕೊಂಡಿದೆ. ಹಲವು ಶಕ್ತಿ ಕೇಂದ್ರಗಳು ಹುಟ್ಟಿಕೊಂಡಿವೆ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಆರೋಪಿಸಿದ್ದಾರೆ.
ಪಂಚಾಯಿತಿಗಳು ಹಾಗೂ ಇತರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸಜ್ಜಾಗಿಲ್ಲ ಎಂದು ಟೀಕಿಸಿರುವ ಅವರು, 'ಪಕ್ಷದಲ್ಲಿ ಸಾಕಷ್ಟು ಭಿನ್ನಾಭಿಪ್ರಾಯಗಳಿವೆ' ಎಂದು ಗುರುವಾರ ಹೇಳಿದ್ದಾರೆ.
ಆಡಳಿತ ಪಕ್ಷಕ್ಕೆ ಅನುಕೂಲವಾಗುವಂತೆ ಪುರಸಭೆಗಳ ವ್ಯಾಪ್ತಿಯನ್ನು ಏಕಪಕ್ಷೀಯವಾಗಿ ನಿರ್ಧರಿಸಲಾಗುತ್ತಿದೆ ಎಂದು ದೂರಿದ್ದಾರೆ.
ಭಾರತ – ಪಾಕಿಸ್ತಾನ ಸಂಘರ್ಷದ ಕುರಿತೂ ಮಾತನಾಡಿರುವ ಪೈಲಟ್, ಮೂರನೇ ವ್ಯಕ್ತಿ (ಅಮೆರಿಕ ಅಧ್ಯಕ್ಷ) ಕದನ ವಿರಾಮವನ್ನು ಘೋಷಿಸಿರುವುದು ಅನಿರೀಕ್ಷಿತವಾಗಿತ್ತು ಎಂದಿದ್ದಾರೆ.
ಕದನ ವಿರಾಮ ಘೋಷಣೆಯಲ್ಲಿ ತಮ್ಮ ಪಾತ್ರವಿದೆ ಎಂಬುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಹೇಳಿಕೊಂಡಿದ್ದಾರೆ. ಆದಾಗ್ಯೂ, ಅದನ್ನು ಕೇಂದ್ರ ಸರ್ಕಾರವು ಅಲ್ಲಗಳೆಯದಿರುವುದು, ಹೇಳಿಕೆಯನ್ನು ದೃಢೀಕರಿಸಿದಂತೆ ಆಗಿದೆ ಎಂದು ಪ್ರತಿಪಾದಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ 'ಆಪರೇಷನ್ ಸಿಂಧೂರ'ವನ್ನು ಶ್ಲಾಘಿಸಿದ ಪೈಲಟ್, ಸಂಘರ್ಷದ ವೇಳೆ ಮಡಿದವರಿಗೆ ಗೌರವ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.