ADVERTISEMENT

ಶಿಕ್ಷಕರ ನೇಮಕಾತಿ ಹಗರಣ: ಟಿಎಂಸಿಯ ಪ್ರಮುಖ ಮುಖಂಡರು ಭಾಗಿ: ಬಿಜೆಪಿ ಆರೋಪ

ಪಿಟಿಐ
Published 23 ಜುಲೈ 2022, 11:07 IST
Last Updated 23 ಜುಲೈ 2022, 11:07 IST
ದಿಲೀಪ್ ಘೋಷ್
ದಿಲೀಪ್ ಘೋಷ್   

ನವದೆಹಲಿ: ಶಿಕ್ಷಕರ ನೇಮಕಾತಿ ಸೇರಿದಂತೆ ಭ್ರಷ್ಟಾಚಾರ ಹಗರಣದಲ್ಲಿ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಪ್ರಮುಖ ಮುಖಂಡರು ಭಾಗಿಯಾಗಿದ್ದಾರೆ ಎಂದು ಬಿಜೆಪಿ ಶನಿವಾರ ಆರೋಪಿಸಿದೆ.

ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.

ಚಟರ್ಜಿ ಅರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ಅವರನ್ನು ಬಂಧಿಸಲಾಗಿದ್ದು, ಅವರ ಮನೆಯಿಂದ 21 ಕೋಟಿ ರೂಪಾಯಿ ವಶಪಡಿಸಿಕೊಳ್ಳಲಾಗಿದೆ.

ಇದನ್ನೇ ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡಿರುವ ಬಿಜೆಪಿ, ವಿವಿಧ ಹುದ್ದೆಗಳಿಗೆ ನೇಮಕಾತಿ ಸೇರಿದಂತೆ ಹಲವು ವರ್ಷಗಳಿಂದ ಟಿಎಂಸಿ ಮುಖಂಡರು ಅಪಾರ ಪ್ರಮಾಣದ ಹಣವನ್ನು ಸಂಗ್ರಹಿಸಿದ್ದು, ಅವೆಲ್ಲವನ್ನು ವಿಚಾರಣೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ದಿಲೀಪ್ ಘೋಷ್, ಪಾರ್ಥ ಚಟರ್ಜಿ ಟಿಎಂಸಿ ಭ್ರಷ್ಟಾಚಾರದ ಸರೋವರದ ಆಳವಾದ ನೀರಿನಲ್ಲಿ ಪತ್ತೆಯಾದ ಮೀನು. ಇದುವರೆಗೆ ದೊರಕಿರುವ ಸಾಕ್ಷ್ಯಾಧಾರಗಳ ಮೇಲೆ ಪ್ರಮುಖ ನಾಯಕರನ್ನು ಪ್ರಶ್ನಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಹಿಂದೆ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿ ವಿರೋಧ ಪಕ್ಷಗಳನ್ನು ಗುರಿಪಡಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದರು. ಇದನ್ನೇ ಉಲ್ಲೇಖಿಸಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, 'ಕಳ್ಳರೇ ಕಿರುಚಾಡುತ್ತಾರೆ' ಎಂದು ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.