ADVERTISEMENT

ತೆರಿಗೆ ಭಯೋತ್ಪಾದನೆ ಕೊನೆಯಾಗಬೇಕು: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ

ಆರ್ಥಿಕತೆ ಭೀಕರ ಸ್ಥಿತಿಯಲ್ಲಿದೆ ಎಂದ ಬಿಜೆಪಿ ರಾಜ್ಯಸಭಾ ಸದಸ್ಯ

ಪಿಟಿಐ
Published 11 ಜನವರಿ 2020, 7:31 IST
Last Updated 11 ಜನವರಿ 2020, 7:31 IST
   

ಅಹಮದಾಬಾದ್:ದೇಶದ ಆರ್ಥಿಕತೆ ಭೀಕರವಾಗಿದ್ದು ಹೂಡಿಕೆದಾರರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ‘ತೆರಿಗೆ ಭಯೋತ್ಪಾದನೆ’ ಕೊನೆಗೊಳಿಸಬೇಕು ಎಂದು ಬಿಜೆಪಿ ರಾಜ್ಯಸಭಾ ಸದಸ್ಯಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಗುಜರಾತ್‌ನ ಇಂಡನ್ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಆರ್ಥಿಕತೆ ಭೀಕರವಾಗಿದೆ. ಎಲ್ಲವೂ ಕೆಳಮುಖವಾಗಿ ಸಾಗುತ್ತಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಬ್ಯಾಂಕುಗಳು, ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಮುಚ್ಚಬೇಕಾಗುತ್ತದೆ ಮತ್ತು ಇದು ವಿಪತ್ತಿಗೆ ಕಾರಣವಾಗಲಿದೆ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

‘ಮೊದಲನೆಯದಾಗಿ ಆದಾಯ ತೆರಿಗೆಯನ್ನು ರದ್ದುಪಡಿಸಬೇಕು. ತೆರಿಗೆ ಭಯೋತ್ಪಾದನೆಯನ್ನು ನಿಯಂತ್ರಿಸಬೇಕು. ಇದರಿಂದ ಜನರು ಹೂಡಿಕೆ ಮಾಡಲು ಆರಂಭಿಸುತ್ತಾರೆ’ ಎಂದು ಸುಬ್ರಮಣಿಯನ್ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

‘ಸದ್ಯ ನಮ್ಮಲ್ಲಿ ಪೂರೈಕೆ ಉತ್ತಮವಾಗಿದ್ದು ಬೇಡಿಕೆಯ ಕೊರತೆ ಎದುರಿಸುತ್ತಿದ್ದೇವೆ. ಆದ್ದರಿಂದ ಬೇಡಿಕೆ ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕಿದೆ. ಸರ್ಕಾರವು ಆರುಪಥ, ಎಂಟುಪಥಗಳ ರಸ್ತೆಗಳನ್ನು ನಿರ್ಮಿಸಬೇಕಿದೆ’ ಎಂದು ಅವರು ಹೇಳಿದ್ದಾರೆ.

ದೆಹಲಿಯ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ನಡೆದ ಗಲಭೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ‘ಸುರಕ್ಷತೆಯ ದೃಷ್ಟಿಯಿಂದ ಪ್ರತಿಯೊಂದು ವಿಶ್ವವಿದ್ಯಾಲಯಗಳಲ್ಲಿಯೂ ಅಮೆರಿಕದ ವಿಶ್ವವಿದ್ಯಾಲಯಗಳಲ್ಲಿ ಇರುವಂತೆ ಪೊಲೀಸರನ್ನು ನಿಯೋಜಿಸಬೇಕು. ಜೆಎನ್‌ಯುನಂತಹ ವಿಶ್ವವಿದ್ಯಾಲಯಗಳಲ್ಲಿ ಪೊಲೀಸರು ಮಾತ್ರವಲ್ಲದೆ ಸಿಆರ್‌ಪಿಎಫ್ ಮತ್ತು ಬಿಎಸ್‌ಎಫ್‌ ಕೂಡಾ ಇರಬೇಕು. ಜೆಎನ್‌ಯುವನ್ನು ಎರಡು ವರ್ಷಗಳ ಮಟ್ಟಿಗೆ ಮುಚ್ಚಿ ಅಲ್ಲಿರುವ ಒಳ್ಳೆಯ ವಿದ್ಯಾರ್ಥಿಗಳನ್ನು ಇತರ ವಿಶ್ವವಿದ್ಯಾಲಯಗಳಿಗೆ ಕಳುಹಿಸಬೇಕು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.