ADVERTISEMENT

'ಮಹಾ' ಸರ್ಕಾರಕ್ಕೆ ಶುಭ ಕೋರಿದ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2019, 6:28 IST
Last Updated 23 ನವೆಂಬರ್ 2019, 6:28 IST
   

ಮುಂಬೈ: ಮಹಾರಾಷ್ಟ್ರದಲ್ಲಿ ಇಂದು ಮುಂಜಾನೆ ನಡೆದ ರಾಜಕೀಯ ಕ್ಷಿಪ್ರ ಬೆಳವಣಿಗೆಯಲ್ಲಿ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ರಾಜ್ಯದ ಚುಕ್ಕಾಣಿ ಹಿಡಿದಿರುವ ದೇವೇಂದ್ರ ಫಡಣವೀಸ್ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಎನ್‌ಸಿಪಿಯ ಅಜಿತ್ ಪವಾರ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದೇವೇಂದ್ರ ಫಡಣವೀಸ್ ಮತ್ತು ಅಜಿತ್ ಪವಾರ್ ಜೀ ಅವರಿಗೆ ಅಭಿನಂದನೆಗಳು. ಮಹಾರಾಷ್ಟ್ರದ ಉಜ್ವಲ ಭವಿಷ್ಯಕ್ಕಾಗಿ ಅವರು ಶ್ರದ್ಧೆಯಿಂದ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ.

ಕೇಂದ್ರದ ಗೃಹ ಸಚಿವ ಅಮಿತ್ ಷಾ ಕೂಡ ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ.

ADVERTISEMENT

ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡಣವೀಸ್ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಅಜಿತ್ ಪವಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಈ ಸರ್ಕಾರವು ಮಹಾರಾಷ್ಟ್ರದ ಅಭಿವೃದ್ಧಿ ಮತ್ತು ಕಲ್ಯಾಣಕ್ಕೆ ನಿರಂತರವಾಗಿ ಬದ್ಧ ಮತ್ತು ರಾಜ್ಯದ ಪ್ರಗತಿಯ ಹೊಸ ಮಾನದಂಡಗಳನ್ನು ರಚಿಸುತ್ತದೆ ಎನ್ನುವ ವಿಶ್ವಾಸ ನನಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಶಿವಸೇನಾ-ಎನ್‌ಸಿಪಿ-ಕಾಂಗ್ರೆಸ್ ಪಕ್ಷಗಳು ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲಿವೆ ಮತ್ತು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನುವ ಮಾತುಗಳು ಈ ಮೂಲಕ ಸುಳ್ಳಾಗಿವೆ. ಬೆಳ್ಳಂಬೆಳಗ್ಗೆಯೇ ರಾಜಭವನಕ್ಕೆ ದೌಡಾಯಿಸಿದ್ದ ಎನ್‌ಸಿಪಿ ಮತ್ತು ಬಿಜೆಪಿ ಸೇರಿ ನೂತನ ಸರ್ಕಾರವನ್ನು ರಚಿಸುವ ಮೂಲಕ ಶಾಕ್ ನೀಡಿವೆ. ದೇವೇಂದ್ರ ಫಡಣವೀಸ್ ಎರಡನೇ ಅವಧಿಗೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.