ADVERTISEMENT

CJI ಸೂರ್ಯಕಾಂತ್‌ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ರಾಹುಲ್ ಗೈರು: BJP ಆಕ್ರೋಶ

ಪಿಟಿಐ
Published 24 ನವೆಂಬರ್ 2025, 10:58 IST
Last Updated 24 ನವೆಂಬರ್ 2025, 10:58 IST
<div class="paragraphs"><p>ರಾಹುಲ್ ಗಾಂಧಿ ಮತ್ತು&nbsp;ಶೆಹಜಾದ್ ಪೂನವಾಲಾ</p></div>

ರಾಹುಲ್ ಗಾಂಧಿ ಮತ್ತು ಶೆಹಜಾದ್ ಪೂನವಾಲಾ

   

ನವದೆಹಲಿ: ನ್ಯಾಯಮೂರ್ತಿ ಸೂರ್ಯ ಕಾಂತ್‌ ಅವರು ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಗೈರಾಗಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ, ಕಾಂಗ್ರೆಸ್‌ ನಾಯಕರಿಗೆ ಡಾ.ಬಿ.ಆರ್. ಅಂಬೇಡ್ಕರ್, ಸಂವಿಧಾನದ ಬಗ್ಗೆ ಗೌರವವಿಲ್ಲ ಎಂದು ಆಕ್ರೋಶ ಹೊರಹಾಕಿದೆ.

‘ಇಂದು, ಇಡೀ ದೇಶ, ವಿಶೇಷವಾಗಿ ಹರಿಯಾಣ, ಭಾರತದ ಮುಖ್ಯ ನ್ಯಾಯಮೂರ್ತಿಗಳ ಪ್ರಮಾಣವಚನ ಸಮಾರಂಭವನ್ನು ಕಣ್ತುಂಬಿಕೊಂಡಿದೆ. ಜತೆಗೆ, ಪ್ರಧಾನಿ ಮೋದಿ ಜಿ ನೇತೃತ್ವದ ಕೇಂದ್ರ ಸರ್ಕಾರದ ಸಚಿವರು ಸೇರಿದಂತೆ ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಆದರೆ, ಕಾಂಗ್ರೆಸ್ಸಿಗರು ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದಾರೆ’ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

‘ಈ ಮುಖ್ಯವಾದ ಕಾರ್ಯಕ್ರಮದಲ್ಲಿ ಭಾಗವಹಿಸುವ ಬದಲು ರಾಹುಲ್ ಗಾಂಧಿ ಅವರು ವಿದೇಶ ಪ್ರವಾಸ ಅಥವಾ ಜಂಗಲ್ ಸಫಾರಿಯಲ್ಲಿರಬಹುದು. ಗಾಂಧಿ ಕುಟುಂಬ, ವಿಶೇಷವಾಗಿ ಅವರು (ರಾಹುಲ್) ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ಆದರೆ, ಅವರು ಅಂಬೇಡ್ಕರ್ ಮತ್ತು ಸಂವಿಧಾನವನ್ನು ಗೌರವಿಸುವುದಿಲ್ಲ. ಹಾಗೆಯೇ ಕಾಂಗ್ರೆಸ್ಸಿಗರು ಕುಟುಂಬ ವ್ಯವಸ್ಥೆ, ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ವ್ಯವಸ್ಥೆಗಿಂತ ಮಿಗಿಲಾದವರಂತೆ ನಡೆದುಕೊಳ್ಳುತ್ತಿದ್ದಾರೆ’ ಎಂದು ಪೂನವಾಲಾ ಟೀಕಿಸಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಸೂರ್ಯ ಕಾಂತ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಸಂವಿಧಾನದ 370ನೇ ವಿಧಿ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಹಾಗೂ ಬಿಹಾರದಲ್ಲಿ ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ಕುರಿತ ಪ್ರಕರಣ ಸೇರಿದಂತೆ ಹಲವು ಮಹತ್ವದ ತೀರ್ಪು ನೀಡಿದ ‍ಪೀಠಗಳಲ್ಲಿ ಸೂರ್ಯ ಕಾಂತ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.