ನವದೆಹಲಿ: ‘ಬಿಜೆಪಿಯ ವಿವಿಧ ರಾಜ್ಯ ಘಟಕಗಳ ಪ್ರತಿನಿಧಿಗಳು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಲಾಕ್‌ಡೌನ್ ಅವಧಿಯಲ್ಲಿ ತಾವು ಕೈಗೊಂಡಿರುವ ಜನಪರ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಶುಕ್ರವಾರ ತಿಳಿಸಿದರು.
‘ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ, ಮುಖಂಡರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಮುಂತಾದವರು ವರ್ಚುವಲ್ ಮಾಧ್ಯಮದ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಪಕ್ಷದ ಡಿಜಿಟಲ್ ವೇದಿಕೆಯಲ್ಲಿ ಈ ಕಾರ್ಯಕ್ರಮದ ನೇರ ಪ್ರಸಾರ ನಡೆಯಲಿದೆ ಎಂದು ಅವರು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.
‘ಮೋದಿ ನೇತೃತ್ವದ ಸರ್ಕಾರವು ಎರಡನೇ ಅವಧಿಯ ಮೊದಲ ವರ್ಷವನ್ನು ಪೂರ್ಣಗೊಳಿಸಿದ್ದ ಹಿನ್ನೆಲೆಯಲ್ಲಿ ಈಗಾಗಲೇ 61 ವರ್ಚುವಲ್ ರ್‍ಯಾಲಿಗಳನ್ನು ನಡೆಸಲಾಗಿದೆ. 11.49 ಕೋಟಿ ಜನರು ಇದನ್ನು ವೀಕ್ಷಿಸಿದ್ದಾರೆ. ಪಕ್ಷದ ಕಾರ್ಯಕರ್ತರು ಮನೆಮನೆಗೆ ಭೇಟಿ ನೀಡಿ 5.41 ಕೋಟಿ ಜನರನ್ನು ಸಂಪರ್ಕಿಸಿದ್ದಾರೆ. ಲಾಕ್‌ಡೌನ್ ಅವಧಿಯಲ್ಲಿ ಪಕ್ಷದ ವತಿಯಿಂದ 22 ಕೋಟಿ ಜನರಿಗೆ ಆಹಾರ ವಿತರಿಸಲಾಗಿದೆ. 80 ಲಕ್ಷ ಸ್ಯಾನಿಟೈಸರ್ ಹಾಗೂ 2.5 ಕೋಟಿ ಮಾಸ್ಕ್‌ಗಳನ್ನು ವಿತರಿಸಲಾಗಿದೆ ಎಂದು ಅವರು ಹೇಳಿದರು.
‘ಮೋದಿ ನಾಯಕತ್ವದಲ್ಲಿ ಜನರಿಗೆ ವಿಶ್ವಾಸವಿದೆ. ಭಾರತದ ಭೂ ಪ್ರದೇಶದ ಮೇಲೆ ಕಣ್ಣಿಟ್ಟಿರುವವರಿಗೆ ತಕ್ಕ ಉತ್ತರ ನೀಡಲಾಗುವುದು ಎಂದು ಅವರು ಈಗಾಗಲೇ ಹೇಳಿದ್ದಾರೆ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಉತ್ತರಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಹಲವು ಪೊಲೀಸರ ಹತ್ಯೆ ನಡೆದಿರುವುದಕ್ಕೆ ಪ್ರತಿಕ್ರಿಯೆ ನೀಡುತ್ತಾ, ‘ಹಿಂದೆ ಅಧಿಕಾರದಲ್ಲಿದ್ದವರು ಈ ಹಿಂಸಾಚಾರದಲ್ಲಿ ಶಾಮೀಲಾಗಿದ್ದಾರೆ. ಅಪರಾಧಿಗಳ ವಿರುದ್ಧ ಕಠಿಣ ನಿಲುವನ್ನು ಬಿಜೆಪಿ ನೇತೃತ್ವದ ಸರ್ಕಾರ ಹೊಂದಿದೆ. ಯೋಗಿ ನೇತೃತ್ವದ ಸರ್ಕಾರವು ಅಪರಾಧಿಗಳನ್ನು ಸುಮ್ಮನೆ ಬಿಡಲಾರದು’ ಎಂದು ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.