ADVERTISEMENT

ಪಶ್ಚಿಮ ಬಂಗಾಳದಲ್ಲಿ ಅಸಹಿಷ್ಣುತೆ ಇದೆ: ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಆರೋಪ

ಏಜೆನ್ಸೀಸ್
Published 10 ಡಿಸೆಂಬರ್ 2020, 10:51 IST
Last Updated 10 ಡಿಸೆಂಬರ್ 2020, 10:51 IST
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ    

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ತಮ್ಮ ಬೆಂಗಾವಲು ಪಡೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದ್ದರ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಜಯಗಳಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿರುವ ನಡ್ಡಾ, ಪಶ್ಚಿಮ ಬಂಗಾಳದಲ್ಲಿ ಅಸಹಿಷ್ಣುತೆ ಇದೆ ಎಂದು ಆರೋಪಿಸಿದ್ದಾರೆ.

'ಗುಂಡು ನಿರೋಧಕ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕಾರಣ ನಾನು ಸುರಕ್ಷಿತವಾಗಿದ್ದೇನೆ. ಪಶ್ಚಿಮ ಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಇದು ಕೊನೆಗೊಳ್ಳಬೇಕಿದೆ' ಎಂದು ಅವರು ತಿಳಿಸಿದ್ದಾರೆ.

ADVERTISEMENT

'ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಮತ್ತು ಬಿಜೆಪಿ ಹಿರಿಯ ಮುಖಂಡ ಮುಕುಲ್‌ ರಾಯ್‌ ಅವರು ಈ ದಾಳಿಯಲ್ಲಿ ಗಾಯಗೊಂಡಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ' ಎಂದು ನಡ್ಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋಲ್ಕತ್ತಾದಿಂದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಪ್ರದೇಶಕ್ಕೆ ತೆರಳುತ್ತಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ.

ನಡ್ಡಾ ಅವರ ಜತೆಗಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರ ಕಾರಿನ ಮೇಲೂ ದಾಳಿ ಮಾಡಲಾಯಿತು ಎಂದು ಬಿಜೆಪಿ ಮೂಲಗಳು ತಿಳಿಸಿವೆ.‌ ಘಟನೆಯಲ್ಲಿ ತಂಡದೊಂದಿಗೆ ತೆರಳುತ್ತಿದ್ದ ಮಾಧ್ಯಮದವರ ವಾಹನಗಳಿಗೂ ಹಾನಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.