ಬಂಧನ
(ಪ್ರಾತಿನಿಧಿಕ ಚಿತ್ರ)
ಸಹರಾನ್‌ಪುರ (ಉತ್ತರ ಪ್ರದೇಶ): ಪತ್ನಿಯ ಶೀಲ ಶಂಕಿಸಿ ಆಕೆಯ ಮೇಲೆ ಗುಂಡು ಹಾರಿಸಿ, ಮೂವರು ಮಕ್ಕಳನ್ನು ಹತ್ಯೆ ಮಾಡಿದ ಆರೋಪದ ಮೇಲೆ ಸ್ಥಳೀಯ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನನ್ನ ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಳು. ಹಾಗಾಗಿ ನಾನು ಕೆಲವು ದಿನಗಳಿಂದ ಮಾನಸಿಕವಾಗಿ ಆಘಾತಕ್ಕೊಳಗಾಗಿ ಕೃತ್ಯ ಎಸಗಿದ್ದೇನೆ ಎಂದು ಆರೋಪಿ ಯೋಗೇಶ್ ರೋಹಿಲ್ಲಾ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಮಗಳು ಶ್ರದ್ಧಾ (12) ಮತ್ತು ಮಗ ದೇವಾಂಶ್ (5) ಸ್ಥಳದಲ್ಲೇ ಸಾವನ್ನಪ್ಪಿದರೆ, ಪತ್ನಿ ನೇಹಾ (36) ಮತ್ತು ಮತ್ತೊಬ್ಬ ಮಗ ಶಿವಾಂಶ್ (7) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶಿವಾಂಶ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರೆ, ನೇಹಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನೇಹಾ ಅವರ ಸಹೋದರ, ಶಾಮ್ಲಿ ಜಿಲ್ಲೆಯ ನಿವಾಸಿ ರಜನೀಶ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಾಗರ್ ಜೈನ್ ತಿಳಿಸಿದ್ದಾರೆ.
ಘಟನೆ ಸಂಬಂಧ ಆರೋಪಿಯನ್ನು ಬಂಧಿಸಲಾಗಿದ್ದು, ಕೃತ್ಯಕ್ಕೆ ಬಳಸಿದ್ದ ಪಿಸ್ತೂಲ್, ನಾಲ್ಕು ಶೆಲ್‌ಗಳು, 10 ಕಾರ್ಟ್ರಿಡ್ಜ್‌ಗಳು ಮತ್ತು ಎರಡು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜೈನ್ ಹೇಳಿದ್ದಾರೆ.
2012ರಲ್ಲಿ ಯೋಗೇಶ್ ಅವರ ಮೊದಲ ಪತ್ನಿ ನಿಧನರಾಗಿದ್ದರು. ನಂತರ 2013ರಲ್ಲಿ ಅವರು ಶಾಮ್ಲಿ ಜಿಲ್ಲೆಯ ಕೈರಾನಾದ ನೇಹಾ ಅವರನ್ನು ಎರಡನೇ ಮದುವೆಯಾಗಿದ್ದರು. ದಂಪತಿಗೆ ಮೂವರು ಮಕ್ಕಳಿದ್ದರು.
ನನ್ನ ಪತ್ನಿ ಬೇರೊಬ್ಬ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಸಾಕಷ್ಟು ಮನವೊಲಿಕೆ ಹೊರತಾಗಿಯೂ ನೇಹಾ ಆ ವ್ಯಕ್ತಿಯೊಂದಿಗಿನ ಸಂಬಂಧವನ್ನು ಕೊನೆಗೊಳಿಸಲಿಲ್ಲ. ಪತ್ನಿಯ ಅಕ್ರಮ ಸಂಬಂಧದಿಂದಾಗಿ ಸಮಾಜದಲ್ಲಿ ನನ್ನ ಪ್ರತಿಷ್ಠೆಗೆ ಧಕ್ಕೆಯಾದ ಹಿನ್ನೆಲೆಯಲ್ಲಿ ನೇಹಾ ಮತ್ತು ಮೂವರು ಮಕ್ಕಳ ಮೇಲೆ ಪಿಸ್ತೂಲ್‌ನಿಂದ ಗುಂಡು ಹಾರಿಸಿದೆ ಎಂದು ಯೋಗೇಶ್ ತಪ್ಪೊಪ್ಪಿಕೊಂಡಿರುವುದಾಗಿ ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.