ಸೇಲಂ (ತಮಿಳುನಾಡು): ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಬಿಜೆಪಿ, ಲೋಕಸಭೆಗೆ ಅವಧಿ ಪೂರ್ವ ಚುನಾವಣೆ ಘೋಷಿಸುವ ಸಾಧ್ಯತೆಗಳಿವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಶನಿವಾರ ಹೇಳಿದ್ದಾರೆ.
ಸೇಲಂನಲ್ಲಿ ಡಿಎಂಕೆ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಸ್ಟಾಲಿನ್, ‘2014 ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ, ಒಂಬತ್ತು ವರ್ಷಗಳಲ್ಲಿ ಬಿಜೆಪಿ ತಮಿಳುನಾಡಿಗೆ ಏನು ಮಾಡಿದೆ’ ಎಂದು ಪ್ರಶ್ನಿಸಿದರು.
ಅಮಿತ್ ಶಾ ತಮಿಳುನಾಡಿಗೆ ಭೇಟಿ ನೀಡಿ ವೆಲ್ಲೂರಿನಲ್ಲಿ ಸಾರ್ವಜನಿಕ ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡುವ ಬಗ್ಗೆ ಕಳೆದ ಎರಡು ದಿನಗಳಿಂದ ವರದಿಗಳು ಬರುತ್ತಿವೆ ಎಂದು ಸ್ಟಾಲಿನ್ ಹೇಳಿದ್ದಾರೆ.
ಅಮಿತ್ ಶಾ ಶನಿವಾರ ರಾತ್ರಿ ತಮಿಳುನಾಡಿಗೆ ಬಂದಿದ್ದು, ಭಾನುವಾರ ವೆಲ್ಲೂರಿನಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ದಕ್ಷಿಣ ಚೆನ್ನೈ ಲೋಕಸಭಾ ಕ್ಷೇತ್ರದ ಬಿಜೆಪಿ ಪದಾಧಿಕಾರಿಗಳನ್ನೂ ಶಾ ಭೇಟಿಯಾಗಲಿದ್ದಾರೆ.
ಲೋಕಸಭೆ ಚುನಾವಣೆಗೆ ಸಿದ್ಧರಾಗಿರಿ ಎಂದು ಡಿಎಂಕೆ ಕಾರ್ಯಕರ್ತರಿಗೆ ತಿಳಿಸಿರುವ ಸ್ಟಾಲಿನ್, ಯಾವುದೇ ರಾಜಕೀಯ ಪಕ್ಷವು ಡಿಎಂಕೆಯನ್ನು ಸೋಲಿಸಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನ ಎಲ್ಲಾ ಸ್ಥಾನಗಳನ್ನು ಗೆಲ್ಲಲು ಶ್ರಮಿಸಬೇಕು ಎಂದು ಅವರು ಪಕ್ಷದ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.
ಎಐಎಡಿಎಂಕೆ ಜೊತೆಗಿನ ರಾಜಕೀಯ ಮೈತ್ರಿಯ ಭಾಗವಾಗಿ ತಮಿಳುನಾಡಿನಲ್ಲಿ ಬಿಜೆಪಿ 11 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ.
ಲೋಕಸಭೆಗೆ ಅವಧಿಪೂರ್ವ ಚುನಾವಣೆ ನಡೆಯುವ ಬಗ್ಗೆ ಸ್ಟಾಲಿನ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ, ‘ಸಿಎಂ ಮುಖದಲ್ಲಿ ತುಂಬಾ ಭಯ ಕಾಣುತ್ತಿದೆ. ಭಾನುವಾರ ಅವರ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತೇವೆ. ಕಳೆದ 2 ವರ್ಷಗಳಲ್ಲಿ ತಮಿಳುನಾಡಿಗೆ ಏನು ಮಾಡಿದ್ದೀರಿ ಎಂದು ಕೇಳುತ್ತೇವೆ. ಅವರು ನಮ್ಮ ಪ್ರಶ್ನೆಗಳಿಗೂ ಉತ್ತರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ತಮಿಳುನಾಡಿನ ಜನರು ಡಿಎಂಕೆ ಪಕ್ಷ ಅಧಿಕಾರದಲ್ಲಿರಲು ಬಯಸುತ್ತಿಲ್ಲ. ಹೀಗಾಗಿ 2024ರಲ್ಲಿ ಲೋಕಸಭೆ ಚುನಾವಣೆಯೊಂದಿಗೇ, ಮೂರು ವರ್ಷ ಮುಂಚಿತವಾಗಿ ವಿಧಾನಸಭೆ ಚುನಾವಣೆ ನಡೆಯಬೇಕೆಂದು ಬಯಸುತ್ತಿದ್ದಾರೆ’ ಎಂದು ತಿರುಗೇಟು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.