ಅಹಮದಾಬಾದ್: ಗುಜರಾತ್‌ನಲ್ಲಿ ಸತತ 7ನೇ ಬಾರಿಗೆ ಐತಿಹಾಸಿಕ ಜಯದತ್ತ ಬಿಜೆಪಿ ದಾಪುಗಾಲಿಟ್ಟಿದೆ. 150ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಬಿಜೆಪಿಯ ಅಭ್ಯರ್ಥಿಗಳು ಮುನ್ನಡೆ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಭೂಪೇಂದ್ರ ಪಟೇಲ್ ಮತ್ತೊಮ್ಮೆ ಸಿಎಂ ಗಾದಿ ಏರುವುದಕ್ಕೆ ಮುಹೂರ್ತ ನಿಗದಿಯಾಗಿದೆ. ಇದೇ 12ರಂದು ಪಟೇಲ್ 2ನೇ ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸಹ ಭಾಗವಹಿಸಲಿದ್ದಾರೆ ಎಂದು ಎಎನ್‌ಐ ಟ್ವೀಟಿಸಿದೆ.
ಅಭಿವೃದ್ಧಿ ಪರವಾದ ಆಡಳಿತದ ಜೊತೆ ಮುಂದುವರಿಯಲು ಜನ ನಿರ್ಧರಿಸಿರುವುದನ್ನು ಈ ಫಲಿತಾಂಶ ಸೂಚಿಸುತ್ತದೆ. ಜನರ ತೀರ್ಪನ್ನು ಅತ್ಯಂತ ವಿನಮ್ರತೆಯಿಂದ ಸ್ವೀಕರಿಸುತ್ತೇವೆ. ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತನು ಅಭಿವೃದ್ಧಿ ಪರವಾಗಿ ಕೆಲಸ ಮಾಡಲು ಬದ್ಧರಾಗಿದ್ದಾನೆ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೇಳಿದ್ದಾರೆ.
ಮಧ್ಯಾಹ್ನ 2ರವರೆಗಿನ ಮಾಹಿತಿ ಪ್ರಕಾರ, ಗುಜರಾತ್‌ನಲ್ಲಿ ಬಿಜೆಪಿ 158 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದ್ದರೆ, ಕಾಂಗ್ರೆಸ್ 16ರಿಂದ 18 ಕ್ಷೇತ್ರಗಳಲ್ಲಿ ಮುನ್ನಡೆಯಲಿತ್ತು. ಬಹಳ ನಿರೀಕ್ಷೆ ಇಟ್ಟುಕೊಂಡಿದ್ದ ಆಮ್ ಆದ್ಮಿ ಪಕ್ಷ(ಎಎಪಿ) ಕೇವಲ 7ರಲ್ಲಿ ಮುನ್ನಡೆ ಪಡೆದುಕೊಂಡಿದೆ.
1995ರಿಂದ ಬಿಜೆಪಿ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿಲ್ಲ. 186 ಕ್ಷೇತ್ರಗಳ ಪೈಕಿ ಈ ಬಾರಿ ದಾಖಲೆಯ 158 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯದತ್ತ ಮುಖ ಮಾಡಿದ್ದಾರೆ.
ಗುಜರಾತ್‌ನಲ್ಲಿ 30ಕ್ಕೂ ಅಧಿಕ ರ್‍ಯಾಲಿಗಳನ್ನು ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ಭಾರಿ ಪ್ರಚಾರ ನಡೆಸಿದ್ದರು. ಇಂದು ಸಂಜೆ 6.30ರ ವೇಳೆಗೆ ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮೋದಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.