ನವದೆಹಲಿ: ಅಹಮದಾಬಾದ್ ವಿಮಾನ ದುರಂತಕ್ಕೆ ಸಂಬಂಧಪಟ್ಟಂತೆ ಪ್ರಾಥಮಿಕ ವರದಿ ಬಿಡುಗಡೆಯಾದ ಬೆನ್ನಲ್ಲೇ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ವಿಮಾನ ತಯಾರಕ ಕಂಪನಿ ಬೋಯಿಂಗ್ ತಿಳಿಸಿದೆ.
ವಿಮಾನ ಅಘಘಾತಗಳ ತನಿಖಾ ಸಂಸ್ಥೆಯು(ಎಎಐಬಿ) ಶುಕ್ರವಾರ ತಡರಾತ್ರಿ ಪ್ರಾಥಮಿಕ ವರದಿಯನ್ನು ಬಿಡುಗಡೆ ಮಾಡಿದೆ. ವರದಿಯಲ್ಲಿ ಬೋಯಿಂಗ್ 787-8 ವಿಮಾನ ನಿರ್ವಾಹಕರ ಮೇಲೆ ಸದ್ಯಕ್ಕೆ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಶಿಫಾರಸು ಮಾಡಿದೆ.
ವರದಿ ಬಿಡುಗಡೆಯಾಗುತ್ತಿದ್ದಂತೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಬೋಯಿಂಗ್ ಮುಖ್ಯಸ್ಥ ಕೆಲ್ಲಿ ಆರ್ಟ್‌ಬರ್ಗ್, ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.
‘ವಿಮಾನ ದುರಂತದಲ್ಲಿ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬದವರೊಂದಿಗೆ ನಾವಿದ್ದೇವೆ. ಏರ್ ಇಂಡಿಯಾ ಮುಖ್ಯಸ್ಥ ಎನ್. ಚಂದ್ರಶೇಖರನ್ ಅವರೊಂದಿಗೆ ಮಾತನಾಡಿದ್ದು ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ್ದೇವೆ. ಭಾರತದ ವಿಮಾನ ಅಪಘಾತ ತನಿಖಾ ಸಂಸ್ಥೆ ನೇತೃತ್ವದಲ್ಲಿ ನಡೆಯುತ್ತಿರುವ ತನಿಖೆಗೂ ಸಂಪೂರ್ಣ ಸಹಕಾರ ನೀಡುತ್ತೇವೆ’ ಎಂದಿದ್ದಾರೆ.
ಜೂನ್ 12ರಂದು ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾದ ಬೋಯಿಂಗ್ ಡ್ರೀಮ್‌ಲೈನರ್ 787-8 ವಿಮಾನವು ಟೆಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತ್ತು. ವಿಮಾನದಲ್ಲಿದ್ದ 241 ಮಂದಿ ಸೇರಿ 260 ಜನ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.