ADVERTISEMENT

‘ದೇಶಭ್ರಷ್ಟ ಆರ್ಥಿಕ ಅಪರಾಧಿ’: ಮಲ್ಯ ಅರ್ಜಿ ತಿರಸ್ಕರಿಸಿದ ಬಾಂಬೆ ಹೈಕೋರ್ಟ್‌

ಜಾರಿ ನಿರ್ದೇಶನಾಲಯದ ಮನವಿಗೆ ತಡೆ ನೀಡಲು ಕೋರಿ ಅರ್ಜಿ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2018, 14:15 IST
Last Updated 22 ನವೆಂಬರ್ 2018, 14:15 IST
ವಿಜಯ್ ಮಲ್ಯ
ವಿಜಯ್ ಮಲ್ಯ   

ಮುಂಬೈ:‘ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಘೋಷಿಸಲು ಹಾಗೂ ನನ್ನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿರುವ ಮನವಿಗೆ ತಡೆ ನೀಡಬೇಕು’ ಎಂಬ ಉದ್ಯಮಿ ವಿಜಯ ಮಲ್ಯ ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ಹೈಕೋರ್ಟ್‌ ಗುರುವಾರ ವಜಾಗೊಳಿಸಿದೆ.

‘ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ’ಯಡಿ ಮಲ್ಯ ಅವರನ್ನು ದೇಶಭ್ರಷ್ಟ ಎಂದು ಘೋಷಿಸಲು ಅನುಮತಿ ನೀಡುವಂತೆ ಕೋರಿದ್ದ ಇ.ಡಿ, ಈ ಸಂಬಂಧ ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್‌ಎ) ಕಾಯ್ದೆಯ ವಿಶೇಷ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.

ಬಾಕಿ ಸಾಲ ವಸೂಲಿಗಾಗಿ ಮಲ್ಯ ವಿರುದ್ಧ ಬ್ಯಾಂಕುಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಪಿಎಂಎಲ್‌ಎಯ ಮೇಲ್ಮನವಿ ನ್ಯಾಯಮಂಡಳಿಯು ನ.26ರಂದು ನಡೆಸಲಿದೆ. ಅಲ್ಲಿಯ ವರೆಗೆ ಇ.ಡಿ ಸಲ್ಲಿಸಿರುವ ಮನವಿಗೆ ತಡೆಯಾಜ್ಞೆ ನೀಡುವಂತೆ ಕೋರಿ ಮಲ್ಯ ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಲಯ ತಿರಸ್ಕರಿಸಿತ್ತು. ನಂತರ ಮಲ್ಯ, ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಆರೋಪಿಯೊಬ್ಬನನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಸಾರಿದರೆ, ತನಿಖೆ ನಡೆಸುವ ಸಂಸ್ಥೆಯು ಆರೋಪಿಗೆ ಸೇರಿದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಈ ಕಾಯ್ದೆ ಅವಕಾಶ ಕಲ್ಪಿಸುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.