ವಯನಾಡ್: ಕೇರಳದ ಕೋಯಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಿದುಳಿನ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ 45 ವರ್ಷದ ವ್ಯಕ್ತಿಯೊಬ್ಬರು ಶನಿವಾರ ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಸುಲ್ತಾನ್ ಬತ್ತೇರಿ ಮೂಲದ ರತೀಶ್ ಮೃತಪಟ್ಟವರು. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ ಕಾಯಿಲೆಗೆ ತುತ್ತಾಗಿದ್ದರು.
ಮಿದುಳಿನ ಸೋಂಕಿನ ಲಕ್ಷಣಗಳಿರುವ 11 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೋಯಿಕ್ಕೋಡ್ ವೈದ್ಯಕೀಯ ಕಾಲೇಜಿನ ವೈದ್ಯರು ತಿಳಿಸಿದ್ದಾರೆ.
ಈ ಸೋಂಕಿನಿಂದ ಆಗಸ್ಟ್ ತಿಂಗಳಲ್ಲಿ ಮೂವರು ಮೃತಪಟ್ಟಿದ್ದರು. ಇದರಿಂದಾಗಿ ಕೇರಳದ ಆರೋಗ್ಯ ಇಲಾಖೆಯು ಸಾರ್ವಜನಿಕರಿಗೆ ಅಮೀಬಾ ಕಾಯಿಲೆಯ ಬಗ್ಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಕಲುಷಿತ ನೀರಿನ ಬಳಕೆಯೇ ಈ ಸೋಂಕಿಗೆ ಕಾರಣ. ಈವರೆಗೆ ಕೇರಳದಲ್ಲಿ 42 ಮಂದಿ ಈ ಸೋಂಕಿನಿಂದ ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.