ಸಂಸತ್ ಅಧಿವೇಶನ
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನವು ಸೋಮವಾರದಿಂದ ಪುನರಾರಂಭ ಆಗಲಿದೆ. ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಲು ವಿರೋಧ ಪಕ್ಷಗಳು ಸಿದ್ಧತೆ ನಡೆಸಿವೆ.
ಅಲ್ಲದೆ, ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿರುವುದು, ಅಮೆರಿಕದ ಡೊನಾಲ್ಡ್ ಟ್ರಂಪ್ ನೇತೃತ್ವದ ಆಡಳಿತದ ಕೆಲವು ತೀರ್ಮಾನಗಳನ್ನು ನಿಭಾಯಿಸುವಲ್ಲಿ ಕೇಂದ್ರ ಸರ್ಕಾರ ಇರಿಸಿದ ಹೆಜ್ಜೆಗಳನ್ನು ಕೂಡ ಪ್ರಸ್ತಾಪಿಸಿ, ಸರ್ಕಾರದೊಂದಿಗೆ ಮುಖಾಮುಖಿಯಾಗಲು ವಿರೋಧ ಪಕ್ಷಗಳು ಸಜ್ಜಾಗಿವೆ.
ಬಜೆಟ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದು, ಮಣಿಪುರ ಬಜೆಟ್‌ಗೆ, ವಕ್ಫ್ ತಿದ್ದುಪಡಿ ಮಸೂದೆಗೆ ಒಪ್ಪಿಗೆ ಪಡೆದುಕೊಳ್ಳುವುದು ಕೇಂದ್ರ ಸರ್ಕಾರದ ಆದ್ಯತೆಯ ಕಾರ್ಯಗಳಾಗಿರಲಿವೆ. ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತಂದಿರುವುದಕ್ಕೆ ಸಂಸತ್ತಿನ ಒಪ್ಪಿಗೆ ಪಡೆಯುವುದಕ್ಕೆ ಗೃಹ ಸಚಿವ ಅಮಿತ್ ಶಾ ಅವರು ನಿರ್ಣಯ ಮಂಡಿಸುವ ನಿರೀಕ್ಷೆ ಇದೆ.
ಮತದಾರರ ಗುರುತಿನ ಚೀಟಿಯಲ್ಲಿ ಇರುವ ‘ಎಪಿಕ್’ ಸಂಖ್ಯೆಗಳು ಒಂದೇ ಆಗಿರುವ ನಿದರ್ಶನಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವುದಾಗಿ ವಿರೋಧ ಪಕ್ಷಗಳು ಹೇಳಿವೆ. ‘ಎಪಿಕ್’ ವಿಚಾರವಾಗಿ ಟಿಎಂಸಿ ನಾಯಕರು ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳನ್ನು ಸೋಮವಾರ ಭೇಟಿ ಮಾಡಲಿದ್ದಾರೆ. ‘ಎಪಿಕ್’ ವಿಚಾರವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವಂತೆ ಕಾಂಗ್ರೆಸ್, ಡಿಎಂಕೆ, ಶಿವಸೇನಾ (ಯುಬಿಟಿ) ಪಕ್ಷಗಳಿಗೆ ಟಿಎಂಸಿ ಮನವಿ ಮಾಡಿದೆ.
ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಂ ಸಮುದಾಯದ ಹಲವು ಸಮಸ್ಯೆಗಳನ್ನು ಪರಿಹರಿಸಲಿರುವ ಕಾರಣಕ್ಕೆ, ಈ ಮಸೂದೆಗೆ ಸಂಸತ್ತಿನ ಒಪ್ಪಿಗೆಯನ್ನು ಆದಷ್ಟುಬೇಗ ಪಡೆದುಕೊಳ್ಳಲು ಸರ್ಕಾರ ಬಯಸಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.
ಆದರೆ, ವಕ್ಫ್ ಮಸೂದೆಗೆ ಒಟ್ಟಾಗಿ ವಿರೋಧ ದಾಖಲಿಸಲು ವಿರೋಧ ಪಕ್ಷಗಳು ವ್ಯಾಪಕ ಸಮಾಲೋಚನೆ ನಡೆಸಲಿವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ. ಬಜೆಟ್ ಅಧಿವೇಶನದ ಮುಂದುವರಿದ ಭಾಗವು ಏಪ್ರಿಲ್ 4ರವರೆಗೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.