ಅಪಘಾತ
ಪ್ರಾತಿನಿಧಿಕ ಚಿತ್ರ
ರಾಂಪುರ (ಉತ್ತರ ಪ್ರದೇಶ): ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟು, ಸುಮಾರು 49 ಪ್ರಯಾಣಿಕರು ಗಾಯಗೊಂಡಿದ್ದಾರೆ. ಇಲ್ಲಿನ ಮಿಲಾಕ್ ಪ್ರದೇಶದಲ್ಲಿ ಸೋಮವಾರ ಮುಂಜಾನೆ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕನ್ವರ್ ಯಾತ್ರಾ ಮಾರ್ಗದ ದೆಹಲಿ-ಬರೇಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಹರಿದ್ವಾರದಿಂದ ಶ್ರಾವಸ್ತಿ ಜಿಲ್ಲೆಗೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ಬರೇಲಿಯಿಂದ ದೆಹಲಿಗೆ ಹೋಗುತ್ತಿದ್ದ ಸರ್ಕಾರಿ ಬಸ್ (ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ– UPSRTC) ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಜೋಗಿಂದರ್ ಸಿಂಗ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರಾಂಪುರ ವಿದ್ಯಾಸಾಗರ್ ಮಿಶ್ರಾ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬಸ್ ಚಾಲಕ ಸೇರಿದಂತೆ ಮೂವರು ಸಾವಿಗೀಡಾಗಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಸುಮಾರು 49 ಮಂದಿ ಗಾಯಗೊಂಡಿದ್ದಾರೆ ಎಂದು ಜೋಗಿಂದರ್ ಸಿಂಗ್ ಹೇಳಿದ್ದಾರೆ.
ಗಾಯಾಳುಗಳನ್ನು ಮಿಲಾಕ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. 9 ಜನರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.