ADVERTISEMENT

ಸಿಎಎ ಸಮರ್ಥಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ವಕೀಲ ಅಶ್ವಿನಿ ಉಪಾಧ್ಯಾಯ ಅವರಿಂದ ಅರ್ಜಿ | ಸಿಎಎ ಪ್ರಶ್ನಿಸಿರುವ ಪಿಐಎಲ್‌ಗಳ ವಜಾಕ್ಕೆ ಮನವಿ

ಪಿಟಿಐ
Published 4 ಏಪ್ರಿಲ್ 2024, 15:11 IST
Last Updated 4 ಏಪ್ರಿಲ್ 2024, 15:11 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ನವದೆಹಲಿ: ಪಾಕಿಸ್ತಾನ, ಅಫ್ಗಾನಿಸ್ತಾನ ಹಾಗೂ ಬಾಂಗ್ಲಾದೇಶದಲ್ಲಿ ಕಿರುಕುಳಕ್ಕೆ ಒಳಗಾಗಿರುವ ಮುಸ್ಲಿಮೇತರರ ಬದುಕುವ, ಸ್ವಾತಂತ್ರ್ಯ ಹಾಗೂ ಘನತೆಯ ಹಕ್ಕುಗಳನ್ನು ಸಂರಕ್ಷಿಸುವ ಉದ್ದೇಶದಿಂದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ಸಂಬಂಧಿತ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿರುವ ಹೊಸ ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಮೂಲಕ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಮರ್ಥಿಸಿಕೊಳ್ಳಲಾಗಿದೆ.

ADVERTISEMENT

ವಕೀಲ ಅಶ್ವಿನಿ ಉಪಾಧ್ಯಾಯ ಅವರು ಈ ವಿಷಯ ಕುರಿತ ಅರ್ಜಿಗಳ ವಿಚಾರಣೆಗೆ ಸಂಬಂಧಿಸಿ ತಮ್ಮನ್ನು ಸಹ ಕಕ್ಷಿದಾರನನ್ನಾಗಿ ಮಾಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯಲ್ಲಿ ಈ ವಿಷಯ ತಿಳಿಸಿದ್ದಾರೆ.

ಸಿಎಎ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ವಿಲೇವಾರಿ ಮಾಡುವವರೆಗೆ ‘ಸಿಎಎ ನಿಯಮಗಳು, 2024’ ಜಾರಿಗೆ ತಡೆ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್‌) ಸಲ್ಲಿಸಲಾಗಿತ್ತು. ಈ ಅರ್ಜಿಗಳ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಮಾರ್ಚ್ 19ರಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದ್ದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ಪೀಠ, ಸಿಎಎ ನಿಯಮಗಳ ಅನುಷ್ಠಾನಕ್ಕೆ ತಡೆ ನೀಡಲು ನಿರಾಕರಿಸಿತ್ತು.  

ಸಿಎಎ ಅನುಷ್ಠಾನ ಪ್ರಶ್ನಿಸಿ ಇಂಡಿಯನ್‌ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್‌) ಸೇರಿದಂತೆ ಇತರರು ಸಲ್ಲಿಸಿರುವ ಪಿಐಎಲ್‌ಗಳನ್ನು ವಜಾಗೊಳಿಸುವಂತೆ ಉಪಾಧ್ಯಾಯ ಕೋರಿದ್ದಾರೆ.

‘ಸಿಎಎ ಅನುಷ್ಠಾನ ಪ್ರಶ್ನಿಸಿ ಐಯುಎಂಎಲ್‌ ಹಾಗೂ ಇತರರು ಸಲ್ಲಿಸಿರುವ ಅರ್ಜಿಗಳು ರಾಜಕೀಯ ಪ್ರೇರಿತವಾಗಿವೆ. ಈ ತಿದ್ದುಪಡಿ ಕಾಯ್ದೆ ಅನುಷ್ಠಾನದಿಂದ ಅರ್ಜಿದಾರರ ಯಾವ ಮೂಲಭೂತ ಹಕ್ಕುಗಳ ಉಲ್ಲಂಘನೆಯೂ ಆಗುವುದಿಲ್ಲ. ಹೀಗಾಗಿ, ಸಂವಿಧಾನ 32ನೇ ವಿಧಿ ಪ್ರಕಾರ, ಈ ಪಿಐಎಲ್‌ಗಳು ಸಮರ್ಥನೀಯವಲ್ಲದ ಕಾರಣ, ಅವುಗಳನ್ನು ವಜಾಗೊಳಿಸುವ ಮೂಲಕ ನ್ಯಾಯಾಲಯದ ಅಮೂಲ್ಯ ಸಮಯವನ್ನು ಉಳಿಸಬೇಕು’ ಎಂದು ಉಪಾಧ್ಯಾಯ ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಸಿಎಎ ಹಾಗೂ ಸಂಬಂಧಿತ ನಿಯಮಗಳ ಅನುಷ್ಠಾನ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಏಪ್ರಿಲ್‌ 9ರಂದು ನಡೆಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.