ಕೋಲ್ಕತ್ತ: ನ್ಯಾಯಾಂಗದ ಬಗ್ಗೆ ತಮಗೆ ಅತ್ಯಂತ ಗೌರವವಿದೆ. ಆದರೆ, ಶಾಲಾ ಶಿಕ್ಷಕರ ನೇಮಕಾತಿಗಳನ್ನು ರದ್ದು ಮಾಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 25,753 ಶಿಕ್ಷಕರು ಮತ್ತು ಇತರೆ ಸಿಬ್ಬಂದಿ ನೇಮಕಾತಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.
ಈ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ನ್ಯಾಯಾಂಗ ಮತ್ತು ನ್ಯಾಯಮೂರ್ತಿಗಳ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೂ ಮಾನವೀಯ ದೃಷ್ಟಿಕೋನದಿಂದ ನಾನು ತೀರ್ಪನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಮಮತಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಆದರೂ, ಎಲ್ಲ ಕಾನೂನು ಆಯ್ಕೆಗಳನ್ನು ಪರಿಶೀಲಿಸಿದ ಬಳಿಕ ಸರ್ಕಾರವು ಸುಪ್ರೀಂ ಕೋರ್ಟ್ ನಿರ್ಧಾರಕ್ಕೆ ಬದ್ಧವಾಗಿರುತ್ತದೆ ಎಂದು ಅವರು ಒತ್ತಿ ಹೇಳಿದ್ದಾರೆ.
ನಾವು ತೀರ್ಪನ್ನು ಒಪ್ಪಿಕೊಳ್ಳಬೇಕು ಮತ್ತು ಕಾನೂನಿನ ಅನ್ವಯ ಸಾಧ್ಯವಿರುವ ಎಲ್ಲವನ್ನೂ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.
ರಾಜ್ಯದ ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ ಎಂದು ಬ್ಯಾನರ್ಜಿ ತಿಳಿಸಿದ್ದಾರೆ.
ವ್ಯಾಪಂ ಪ್ರಕರಣದಲ್ಲಿ ಎಷ್ಟು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ ಎಂದು ಅವರು ಪ್ರಶ್ನಿಸಿದ್ದಾರೆ. ಬಿಜೆಪಿ, ಪಶ್ಚಿಮ ಬಂಗಾಳದ ಶಿಕ್ಷಣ ವ್ಯವಸ್ಥೆಯ ಕುಸಿತವನ್ನು ಬಯಸುತ್ತದೆಯೇ ಎಂದೂ ಕೇಳಿದ್ದಾರೆ.
ಇದೇವೇಳೆ, ಉದ್ಯೋಗ ಕಳೆದುಕೊಂಡವರನ್ನು ಭೇಟಿ ಮಾಡುವುದಾಗಿ ಹೇಳಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನಾನು ಅವರಿಗೆ ಭರವಸೆ ಕಳೆದುಕೊಳ್ಳಬೇಡಿ ಎಂದು ಸಾಂತ್ವನ ಹೇಳುತ್ತೇನೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.