ನ್ಯಾಯಮೂರ್ತಿ ಯಶವಂತ ವರ್ಮ
ನವದೆಹಲಿ: ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ ವರ್ಮ ಅವರ ವಿರುದ್ಧದ ಆರೋಪಗಳ ಬಗ್ಗೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರು ಮೂವರು ಸದಸ್ಯರ ಸಮಿತಿಯೊಂದನ್ನು ರಚಿಸಿದ್ದಾರೆ.
ಅಗ್ನಿ ಅವಘಡದ ನಂತರ ನ್ಯಾಯಮೂರ್ತಿ ವರ್ಮ ಅವರ ಅಧಿಕೃತ ನಿವಾಸದಲ್ಲಿ ಭಾರಿ ಪ್ರಮಾಣದಲ್ಲಿ ನಗದು ಪತ್ತೆಯಾಗಿದೆ ಎಂದು ವರದಿಯಾಗಿತ್ತು.
ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಅವರಿಂದ ವರದಿ ಪಡೆದ ನಂತರ ಸಿಜೆಐ ಖನ್ನಾ ಅವರು ಆಂತರಿಕ ವಿಚಾರಣೆಗೆ ಸಮಿತಿ ರಚಿಸಿ ಆದೇಶ ಹೊರಡಿಸಿದರು. ನ್ಯಾಯಮೂರ್ತಿ ವರ್ಮ ಅವರಿಗೆ ನ್ಯಾಯಾಂಗಕ್ಕೆ ಸಂಬಂಧಿಸಿದ ಯಾವುದೇ ಕೆಲಸವನ್ನು ಈಗ ವಹಿಸಬಾರದು ಎಂದು ಸಿಜೆಐ ಅವರು ನ್ಯಾಯಮೂರ್ತಿ ಉಪಾಧ್ಯಾಯ ಅವರಿಗೆ ಸೂಚಿಸಿದ್ದಾರೆ.
ವಿಚಾರಣಾ ಸಮಿತಿಯಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಿ.ಎಸ್. ಸಂಧಾವಾಲಿಯಾ, ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಅನು ಶಿವರಾಮನ್ ಅವರು ಇದ್ದಾರೆ.
‘ನ್ಯಾಯಮೂರ್ತಿ ಉಪಾಧ್ಯಾಯ ಅವರು ಸಲ್ಲಿಸಿದ ವರದಿ, ನ್ಯಾಯಮೂರ್ತಿ ವರ್ಮ ಅವರ ಪ್ರತಿಕ್ರಿಯೆ ಮತ್ತು ಇತರ ದಾಖಲೆಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತಿದೆ’ ಎಂದು ಸುಪ್ರೀಂ ಕೋರ್ಟ್‌ನ ಪ್ರಕಟಣೆ ತಿಳಿಸಿದೆ.
ನ್ಯಾಯಮೂರ್ತಿ ವರ್ಮ ಅವರ ಅಧಿಕೃತ ನಿವಾಸದಲ್ಲಿ ಮಾರ್ಚ್ 14ರ ರಾತ್ರಿ ಬೆಂಕಿ ಹೊತ್ತಿಕೊಂಡಾಗ, ಅದನ್ನು ಆರಿಸಲು ಅಗ್ನಿಶಾಮಕ ಸಿಬ್ಬಂದಿ ಅಲ್ಲಿಗೆ ಧಾವಿಸಿದರು. ಆಗ ನಿವಾಸದಲ್ಲಿ ಭಾರಿ ಪ್ರಮಾಣದಲ್ಲಿ ನಗದು ಪತ್ತೆಯಾಗಿದೆ ಎನ್ನಲಾಗಿದೆ.
ಆದರೆ, ಭಾರಿ ಪ್ರಮಾಣದಲ್ಲಿ ನಗದು ಪತ್ತೆಯಾಗಿದೆ ಎಂಬ ಹೇಳಿಕೆಗಳನ್ನು ದೆಹಲಿ ಅಗ್ನಿಶಾಮಕ ದಳದ ಮುಖ್ಯಸ್ಥ ಅತುಲ್ ಗರ್ಗ್ ಅಲ್ಲಗಳೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.