
ನವದೆಹಲಿ: ಲೋಕಸಭಾ ಸಂಸದೆ ಮಹುವಾ ಮೊಯಿತ್ರಾ ಹಾಗೂ ಉದ್ಯಮಿ ದರ್ಶನ್ ಹೀರಾನಂದಾನಿ ಅವರ ವಿರುದ್ಧ ದಾಖಲಾಗಿರುವ ‘ಪ್ರಶ್ನೆಗಾಗಿ ಲಂಚ’ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ತನಿಖಾ ಸಂಸ್ಥೆಯು (ಸಿಬಿಐ) ಸೋಮವಾರ ತನ್ನ ವರದಿಯನ್ನು ಲೋಕಪಾಲಕ್ಕೆ ಸಲ್ಲಿಸಿದೆ.
ಭ್ರಷ್ಟಾಚಾರ ನಿಗ್ರಹ ಸಂಸ್ಥೆಯಾಗಿರುವ ಲೋಕಪಾಲದ ಸೂಚನೆ ಮೇರೆಗೆ ಕಳೆದ ವರ್ಷ ಮಾರ್ಚ್ 21ರಂದು ಮಹುವಾ ಹಾಗೂ ಉದ್ಯಮಿ ದರ್ಶನ್ ವಿರುದ್ಧ ಸಿಬಿಐ ಈ ಪ್ರಕರಣ ದಾಖಲಿಸಿತ್ತು. ಇದೀಗ ಪ್ರಕರಣದ ತನಿಖಾ ವರದಿಯನ್ನು ಸಲ್ಲಿಸಲಾಗಿದೆ.
ವರದಿಯನ್ನು ಪರಿಶೀಲಿಸಿದ ಬಳಿಕ ಲೋಕಪಾಲ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉದ್ಯಮಿ ಗೌತಮ್ ಅದಾನಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ಉದ್ಯಮಿ ದರ್ಶನ್ ಹೀರಾನಂದಾನಿ ಅವರ ಆಣತಿಯಂತೆ 2023ರಲ್ಲಿ ಮಹುವಾ ತಮ್ಮ ಸಂಸತ್ ಖಾತೆ ಮೂಲಕ ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆ. ಇದಕ್ಕಾಗಿ ದರ್ಶನ್ ಅವರಿಂದ ಲಂಚ ಪಡೆದಿರುವುದಲ್ಲದೇ, ತಮ್ಮ ಖಾತೆಯ ಲಾಗಿನ್ ವಿವರಗಳನ್ನೂ ಅವರೊಂದಿಗೆ ಹಂಚಿಕೊಂಡಿದ್ದಾರೆಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆರೋಪಿಸಿದ್ದರು.
ಈ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಗಳನ್ನು ನಡೆಸಿದ ಬಳಿಕ ಮಹುವಾ ಅವರನ್ನು ಲೋಕಸಭೆಯಿಂದ ಉಚ್ಚಾಟನೆ ಮಾಡಲಾಗಿತ್ತು. ಇದೇ ವೇಳೆ ಲೋಕಪಾಲವು ಸಿಬಿಐ ತನಿಖೆಗೆ ಆದೇಶಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.