ಚಂಡೀಗಢ: ರೈತ ಮುಖಂಡರೊಂದಿಗೆ ಮೇ 4ರಂದು ನಡೆಸಲು ಉದ್ದೇಶಿಸಿದ್ದ ಸಭೆಯನ್ನು ಕೇಂದ್ರ ಸರ್ಕಾರ ಮುಂದೂಡಿದೆ.
ಪಂಜಾಬ್ ಸರ್ಕಾರದ ಪ್ರತಿನಿಧಿಗಳು ಸಹ ರೈತರೊಂದಿಗಿನ ಸಭೆಯಲ್ಲಿ ಭಾಗಿಯಾಗುವ ವಿಚಾರಕ್ಕೆ ಸಂಬಂಧಿಸಿದಂತೆ ಒಮ್ಮತ ಮೂಡದ ಕಾರಣ ಮುಂದೂಡಲಾಗಿದೆ ಎನ್ನಲಾಗಿದೆ.
ಕೇಂದ್ರ ಕೃಷಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಪುರನ್ ಚಂದ್ರ ಕಿಶನ್ ಅವರು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯ ರಹಿತ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾಗೆ (ಕೆಎಂಎಂ) ಈ ಸಂಬಂಧ ಪತ್ರ ಬರೆದಿದ್ದಾರೆ.
ಪಂಜಾಬ್ ಸರ್ಕಾರದ ಪ್ರತಿನಿಧಿಗಳನ್ನು ಆಹ್ವಾನಿಸಿದರೆ ಸರ್ಕಾರದೊಂದಿಗಿನ ಮಾತುಕತೆಯನ್ನು ಬಹಿಷ್ಕರಿಸಲಾಗುವುದು ಎಂದು ರೈತ ಮುಖಂಡ ಜಗಜಿತ್ ಸಿಂಗ್ ಡಲ್ಲೇವಾಲ್ ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ.
ಶಂಭು, ಖನೌರಿ ಗಡಿಗಳಲ್ಲಿ ಪ್ರತಿಭಟಿಸುತ್ತಿದ್ದ ರೈತರನ್ನು ಪಂಜಾಬ್ ಸರ್ಕಾರವು ಮಾರ್ಚ್ ತಿಂಗಳಲ್ಲಿ ಹೊರಹಾಕಿದ್ದಕ್ಕೆ ಕೃಷಿಕ ಸಮುದಾಯ ತೀವ್ರ ಅಸಮಾಧಾನ ಹೊಂದಿದೆ ಎಂದು ಡಲ್ಲೇವಾಲ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.