ADVERTISEMENT

ಪ್ರಾಧ್ಯಾಪಕರ ನೇಮಕಾತಿಗೆ ಹೊಸ ಮಸೂದೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2018, 20:00 IST
Last Updated 21 ನವೆಂಬರ್ 2018, 20:00 IST
   

ನವದೆಹಲಿ: ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ನಡೆಸಲು ಹೊಸ ಕಾನೂನನ್ನು ಜಾರಿಗೆ ತರಲು ಸರ್ಕಾರ ಸಿದ್ಧತೆ ನಡೆಸಿದೆ. ಈ ಸಂಬಂಧ ಮುಂದಿನ ಅಧಿವೇಷನದಲ್ಲಿ ಮಸೂದೆಯನ್ನು ಸರ್ಕಾರವು ಸಂಸತ್ತಿನ ಮುಂದೆ ಇರಿಸಲಿದೆ.

ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರ ಹುದ್ದೆಗಳಿಗೆ ವಿಭಾಗಮಟ್ಟದ ಮೀಸಲಾತಿ ಆಧಾರದಲ್ಲಿ ನೇಮಕಾತಿ ನಡೆಸಿ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪನ್ನು ಅಮಾನ್ಯಗೊಳಿಸುವ ಉದ್ದೇಶದಿಂದ ಹೊಸ ಕಾನೂನನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಮೂಲಗಳು ಹೇಳಿವೆ.

ಅಲಹಾಬಾದ್ ಹೈಕೋರ್ಟ್‌ನ ತೀರ್ಪಿಗೆ ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರ ಸಂಘಟನೆಗಳು ಮತ್ತು ದಲಿತ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು.

ADVERTISEMENT

‘ವಿಭಾಗದ ಮಟ್ಟದಲ್ಲಿ ಮೀಸಲಾತಿ ಆಧಾರದಲ್ಲಿ ನೇಮಕಾತಿ ನಡೆಸಿದರೆ ದಲಿತರಿಗೆ ಹುದ್ದೆಗಳು ಸಿಗುವುದಿಲ್ಲ. ಹೀಗಾಗಿ ಸುಗ್ರೀವಾಜ್ಞೆ ಜಾರಿಗೆ ತಂದು ಈ ಹಿಂದೆ ಇದ್ದ ನಿಯಮಾವಳಿಗಳನ್ನೇ ಮರುಸ್ಥಾಪಿಸಬೇಕು’ ಎಂದು ಈ ಸಂಘಟನೆಗಳು ಒತ್ತಾಯಿಸಿದ್ದವು.

ಈ ಸಂಬಂಧ ಸರ್ಕಾರವು ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದೆ. ಆದರೆ ವಿಚಾರಣೆ ಇನ್ನಷ್ಟೇ ಆರಂಭವಾಗಬೇಕಿದೆ. 2019ರ ಲೋಕಸಭಾ ಚುನಾವಣೆಗೂ ಮುನ್ನವೇ ಈ ಕಾನೂನು ಜಾರಿಗೆ ಬರಬೇಕು ಎಂದು ತರಾತುರಿಯಲ್ಲಿ ಮಸೂದೆಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.