ರಾಜನಂದಗಾಂವ್: ಅಕ್ರಮ ಆರೋಪದ ಮೇಲೆ ಛತ್ತೀಸಗಢ ಸರ್ಕಾರ, ರಾಜನಂದಗಾಂವ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ. ಪ್ರಕರಣದ ತನಿಖೆಗಾಗಿ ಎಸ್‌ಐಟಿಯನ್ನು ರಚಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಅವರು ಬುಧವಾರ ಮಧ್ಯಾಹ್ನ ಈ ಕುರಿತು ಆದೇಶ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.
ರಾಜನಂದಗಾಂವ್‌ನಲ್ಲಿ ನಡೆಯುತ್ತಿರುವ 8ನೇ ಬೆಟಾಲಿಯನ್ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಡಿ .17ರಂದು ಲಾಲ್‌ಬಾಗ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಈವರೆಗೆ ನಾಲ್ವರು ಪೊಲೀಸ್ ಕಾನ್‌ಸ್ಟೆಬಲ್‌ಗಳು, ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯ ಇಬ್ಬರು ಉದ್ಯೋಗಿಗಳು ಹಾಗೂ ಒಬ್ಬ ಮಹಿಳಾ ಅಭ್ಯರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣದ ತನಿಖೆಯ ವೇಳೆ ಕಾನ್‌ಸ್ಟೆಬಲ್ ನಿಲ್ ರತ್ನಾಕರ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ರತ್ನಾಕರ್ ಅವರ ಆತ್ಮಹತ್ಯೆಯ ತನಿಖೆಗಾಗಿ ರಾಜನಂದಗಾಂವ್ (ರೇಂಜ್) ಪೊಲೀಸ್ ಮಹಾನಿರೀಕ್ಷಕ ದೀಪಕ್ ಝಾ ಅವರು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ ) ರಚಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭಾ ಸ್ಪೀಕರ್ ರಮಣ್ ಸಿಂಗ್ ಸ್ವಾಗತಿಸಿದ್ದಾರೆ. ಪೊಲೀಸ್ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಬೆಳಕಿಗೆ ಬಂದ ತಕ್ಷಣ ಸಂಪೂರ್ಣ ನೇಮಕಾತಿಯನ್ನು ರದ್ದುಗೊಳಿಸಿದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ನಿರ್ಧಾರ ಶ್ಲಾಘನೀಯ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.