
ಪ್ರಾತಿನಿಧಿಕ ಚಿತ್ರ
ಪಾಲಕ್ಕಾಡ್: ಐದು ವರ್ಷದ ಬಾಲಕಿಯ ಖಾಸಗಿ ಭಾಗಗಳಿಗೆ ಬರೆ ಹಾಕಿರುವ ಅಮಾನವೀಯ ಘಟನೆ ಕೇರಳದ ಪಾಲಕ್ಕಾಡ್‌ನಲ್ಲಿ ನಡೆದಿದೆ.
ಹಾಸಿಗೆಯಲ್ಲಿ ಮೂತ್ರ ಮಾಡಿದ್ದಕ್ಕಾಗಿ ಬಾಲಕಿಯ ಖಾಸಗಿ ಭಾಗಗಳಿಗೆ ಆಕೆಯ ಮಲತಾಯಿಯೇ ಬರೆ ಹಾಕಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಘಟನೆ ಕಳೆದ ವಾರ ನಡೆದಿದೆ. ಅಂಗನವಾಡಿಗೆ ತೆರಳಿದ್ದ ಬಾಲಕಿ ತರಗತಿಯಲ್ಲಿ ಕುಳಿತುಕೊಳ್ಳಲು ಕಷ್ಟಪಡುತ್ತಿದ್ದಳು. ಇದನ್ನು ಗಮನಿಸಿದ ಅಂಗನವಾಡಿ ಶಿಕ್ಷಕಿ ಈ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ಬಾಲಕಿ ತನಗಾದ ನೋವನ್ನು ಹೇಳಿಕೊಂಡಿದ್ದಾಳೆ.
ಈ ಬಗ್ಗೆ ಶಿಕ್ಷಕಿ ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ.
ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಹಾಗೂ ಬಾಲ ನ್ಯಾಯ ಕಾಯ್ದೆಗೆ ಸಂಬಂಧಿಸಿದ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬಾಲಕಿಯ ತಂದೆಯು ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಪ್ರಸ್ತುತ ಬಾಲಕಿ ಮಕ್ಕಳ ಕಲ್ಯಾಣ ಸಮಿತಿಯ (ಸಿಡಬ್ಲ್ಯೂಸಿ) ಆರೈಕೆಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.