ಚಿರಾಗ್ ಪಾಸ್ವಾನ್
ಪಟ್ನಾ: ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್ ಬಣ) ಅಧ್ಯಕ್ಷ, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಇನ್‌ಸ್ಟಾಗ್ರಾಮ್ ಬಳಕೆದಾರರೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆದರಿಕೆ ಕುರಿತಾದ ಸ್ಕ್ರೀನ್‌ಶಾಟ್‌ಗಳನ್ನು ಆಧರಿಸಿ ಲೋಕ ಜನಶಕ್ತಿ ಪಕ್ಷದ ವಕ್ತಾರ ರಾಜೇಶ್ ಭಟ್ ಅವರು ಪಟ್ನಾದ ಸೈಬರ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ದೂರಿನ ಪ್ರತಿಯನ್ನು ಪಕ್ಷವು ತನ್ನ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿದೆ.
ಹಾಜಿಪುರ ಸಂಸದರಾದ ಚಿರಾಗ್ ಪಾಸ್ವಾನ್ ಅವರ ಮೇಲೆ ಬಾಂಬ್ ಹಾಕುವುದಾಗಿ ‘ಟೈಗರ್ ಮೆರಾಜ್ ಇದ್ರಿಸಿ’ ಎಂಬುವರು ಇನ್‌ಸ್ಟಾಗ್ರಾಮ್‌ನಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ರಾಜೇಶ್ ಭಟ್ ವಿವರಿಸಿದ್ದಾರೆ.
ಚಿರಾಗ್ ಪಾಸ್ವಾನ್ ಅವರ ಜನಪ್ರಿಯತೆ ಸಹಿಸಲಾಗದವರು, ಕ್ರಿಮಿನಲ್ ಹಿನ್ನೆಲೆಯುಳ್ಳವರು ಈ ರೀತಿ ಮಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಭಟ್ ಆಗ್ರಹಿಸಿದ್ದಾರೆ.
ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಬೆಂಬಲಿಗರು ಮಾತ್ರ ಈ ರೀತಿ ಮಾಡಲು ಸಾಧ್ಯ ಎಂದು ಲೋಕ ಜನಶಕ್ತಿ ಪಕ್ಷದ ನಾಯಕರೊಬ್ಬರು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.