ADVERTISEMENT

ಪೌರತ್ವ ತಿದ್ದುಪಡಿ ಮಸೂದೆ: ಕೇಂದ್ರ ಸಚಿವ ಸಂಪುಟ ಅನುಮೋದನೆ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2019, 7:18 IST
Last Updated 4 ಡಿಸೆಂಬರ್ 2019, 7:18 IST
ಸಂಸತ್ತು
ಸಂಸತ್ತು   

ನವದೆಹಲಿ: ಬಾಂಗ್ಲಾದೇಶ, ಅಫ್ಗಾನಿಸ್ಥಾನ ಹಾಗೂ ಪಾಕಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ, ಪೌರತ್ವ (ತಿದ್ದುಪಡಿ) ಮಸೂದೆಗೆ ಕೇಂದ್ರ ಸಂಪುಟ ಬುಧವಾರ ಅನುಮೋದನೆ ನೀಡಿದೆ.

‘ಪೌರತ್ವ ತಿದ್ದುಪಡಿ ಮಸೂದೆ ಮಂಡನೆ ವೇಳೆ ಎಲ್ಲ ಸಂಸದರು ಸದನದಲ್ಲಿ ಕಡ್ಡಾಯವಾಗಿ ಹಾಜರಿರಬೇಕು’ ಎಂದು ಸಚಿವ ರಾಜನಾಥ್ ಸಿಂಗ್ ಅವರು ಬಿಜೆಪಿ ಸಂಸದರಿಗೆ ಸೂಚಿಸಿದ್ದಾರೆ.

‘ಜಮ್ಮು ಮತ್ತು ಕಾಶ್ಮೀರ ವಿಶೇಷಾಧಿಕಾರ ರದ್ದತಿ ಮಸೂದೆ ಮಂಡನೆಯಷ್ಟೇ ಮಹತ್ವ ಪೌರತ್ವ ತಿದ್ದುಪಡಿ ಮಸೂದೆಗೂ ಇದೆ’ ಎಂದು ಪಕ್ಷದ ಸಂಸದೀಯ ಸಮಿತಿ ಸಭೆಯಲ್ಲಿ ಹೇಳಿದ್ದಾರೆ.

2016ರಲ್ಲಿ ಮೊದಲಿಗೆ ಸಂಸತ್ತಿನಲ್ಲಿ ಈ ತಿದ್ದುಪಡಿ ಮಸೂದೆ ಮಂಡಿಸಲಾಗಿತ್ತು. ಅಸ್ಸಾಂ ಹಾಗೂ ಈಶಾನ್ಯ ಭಾಗದ ರಾಜ್ಯಗಳ ಜನರು ಈ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

1985ರ ಅಸ್ಸಾಂ ಒಪ್ಪಂದದ ಅನುಸಾರ, 1971ರ ಮಾರ್ಚ್ 24ರ ಬಳಿಕ ವಲಸೆ ಬಂದ ಯಾವುದೇ ಧರ್ಮದವರನ್ನು ಸಹಅಕ್ರಮ ವಲಸಿಗರು ಎಂದು ಪರಿಗಣಿಸಲಾಗುತ್ತದೆ. ಆದರೆ ಈಗ ತಿದ್ದುಪಡಿ ಮಾಡಲಾಗಿರುವ ಮಸೂದೆ ಜಾರಿಗೆ ಬಂದರೆ, ಅಸ್ಸಾಂ ಒಪ್ಪಂದ ಅರ್ಥ ಕಳೆದುಕೊಳ್ಳಲಿದೆ ಎನ್ನುವುದು ಇವರ ವಾದ. ಮೇಘಾಲಯ ಹಾಗೂ ಮಿಜೋರಾಂ ಸರ್ಕಾರಗಳು ಸಹ ಈ ತಿದ್ದುಪಡಿ ಮಸೂದೆ ವಿರೋಧಿಸಿ ನಿರ್ಣಯ ಅಂಗೀಕರಿಸಿವೆ.

ತಿದ್ದುಪಡಿ ಏನು?: ಪ್ರಸ್ತುತ ಪೌರತ್ವ ಕಾಯ್ದೆ 1955ರ ಅನುಸಾರ,ಅಫ್ಗಾನಿಸ್ಥಾನ, ಬಾಂಗ್ಲಾದೇಶ ಹಾಗೂ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದು, ಸಿಖ್‌, ಬೌದ್ಧ, ಜೈನ, ಪಾರ್ಸಿ ಹಾಗೂ ಕ್ರೈಸ್ತ ಧರ್ಮೀಯ ವಲಸಿಗರು ಭಾರತದಲ್ಲಿ 12 ಅಥವಾ ಅದಕ್ಕಿಂತ ಹೆಚ್ಚು ವರ್ಷ ವಾಸವಿದ್ದಲ್ಲಿ ಮಾತ್ರ ಭಾರತೀಯ ಪೌರತ್ವ ಪಡೆಯಲು ಅರ್ಹರಾಗಿದ್ದಾರೆ.

ಆದರೆ ಈ ಕಾಯ್ದೆಗೆ ತಿದ್ದುಪಡಿ ಮಾಡಿ ರೂಪಿಸಲಾಗಿರುವ ಮಸೂದೆ ಅಡಿಯಲ್ಲಿ, ಇವರೆಲ್ಲಾ ಭಾರತದಲ್ಲಿ 6 ವರ್ಷ ವಾಸವಿದ್ದರೆ ಅವರು ಇಲ್ಲಿನ ಪೌರತ್ವ ಪಡೆಯಲು ಅರ್ಹರಾಗುತ್ತಾರೆ. ಯಾವುದೇ ಸೂಕ್ತ ದಾಖಲೆಗಳು ಇಲ್ಲದಿದ್ದರೂ ಅವರು ಪೌರತ್ವಕ್ಕೆ ಅರ್ಜಿ ಸಲ್ಲಿಸಬಹುದು.

ಜಮ್ಮು ಕಾಶ್ಮೀರ ಮೀಸಲಾತಿ (ಎರಡನೇ ತಿದ್ದುಪಡಿ) ಮಸೂದೆ ಹಾಗೂ ಖಾಸಗಿ ದತ್ತಾಂಶ ಸುರಕ್ಷತಾ ಮಸೂದೆ 2019ಕ್ಕೂ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇದೇ ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.